ಹಾಸನ:ಇಂದು 152 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದುವರೆಗೆ 778 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 689 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಇಂದು ಕಂಡು ಬಂದ ಸೋಂಕಿನ ಪ್ರಕರಣಗಳು ಸೇರಿದಂತೆ ಒಟ್ಟು 1508 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.
ಇಂದು ಪತ್ತೆಯದ ಪ್ರಕರಣಗಳ ವಿವರ:
ಹೊಸದಾಗಿ ಪತ್ತೆಯಾದ 152 ಪ್ರಕರಣಗಳಲ್ಲಿ ಹಾಸನ-35, ಅರಸೀಕೆರೆ-41, ಬೇಲೂರು-11, ಹೊಳೆನರಸೀಪುರ-20, ಆಲೂರು-4, ಚನ್ನರಾಯಪಟ್ಟಣ-18, ಸಕಲೇಶಪುರ-8, ಅರಕಲಗೂಡು-15 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ವಿವರಿಸಿದರು.
ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.