ವ್ಯವಸ್ಥಿತವಾಗಿ ಹತ್ತನೇ ತರಗತಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಸಿ.ಟಿ.ರವಿ ಸೂಚನೆ - CT ravi statement
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಸೂಚಿಸಿದರು.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆಯಲಿರುವ ಹತ್ತನೇ ತರಗತಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಸಮನ್ವಯದಿಂದ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪರೀಕ್ಷಾ ಸಿದ್ಧತೆ ಕುರಿತು ಮಕ್ಕಳಲ್ಲಿ ಭಯ ಹುಟ್ಟಿಸದೆ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರ ತಲುಪಲು ಅಗತ್ಯವಾದ ವಾಹನ ಸೌಲಭ್ಯ ಕಲ್ಪಿಸಬೇಕು. ಬೆಳಗ್ಗೆ ಸುಮಾರು 6 ಗಂಟೆಗೆ ಮನೆ ಬಿಡುವುದರಿಂದ ಅಗತ್ಯವಿದ್ದಲ್ಲಿ ತಿಂಡಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಹೆಚ್ಚು ನಿಗಾ ವಹಿಸಬೇಕು. ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ನಡೆಸಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ತಿಳಿಸಬೇಕು ಹಾಗೂ ಕುಡಿಯುಲು ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು.
ಯಾವುದೇ ವಿದ್ಯಾರ್ಥಿಗಳಿಗೆ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಮೂಲಕ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಮುಖ್ಯವಾಗಿ ಸರಿಯಾದ ಗಾಳಿ, ಬೆಳಕು ಹಾಗೂ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು.
ಮುಖ್ಯವಾಗಿ ಶೃಂಗೇರಿ, ಕೊಪ್ಪ, ಮೂಡಿಗೆರೆ ಹಾಗೂ ಮಲೆನಾಡು ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಹೆಚ್ಚಿನ ಬಸ್ ಅಥವಾ ಜೀಪ್ ವಾಹನಗಳ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ವಿಶೇಷ ಗಮನಹರಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇನ್ನಿತರ ಲೋಪದೋಷಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.