ಹುಬ್ಬಳ್ಳಿ/ರಾಯಚೂರು: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ಬರಗಾಲ ಪರಿಹಾರ ಕಾರ್ಯಕ್ರಮ ಜಾರಿಗೊಳಿಸುವಂತೆ ಒತ್ತಾಯಿಸಿ ಹುಬ್ಬಳ್ಳಿ ಹೊರವಲಯದ ಗಬ್ಬೂರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಬೈಪಾಸ್ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಇದರಿಂದ ಪರಿಸ್ಥಿತಿ ಕೈಮೀರಿರುವುದನ್ನು ಅರಿತ ಪೊಲೀಸರು100 ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆದರು. ಬರಪೀಡಿತ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು ಕೂಡಲೇ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.