ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಶಾಲೆಗಳನ್ನು ಮುಂದುವರಿಸಲು ಯಾವೆಲ್ಲ ಯೋಜನೆಗಳನ್ನು ರೂಪಿಸಲಾಗಿದೆ ಎಂಬುದನ್ನು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವಿ ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಶಾಲಾ ಮಕ್ಕಳ ಕುರಿತು ಕಾಳಜಿ ವ್ಯಕ್ತಪಡಿಸಿರುವ ಪೀಠ, ಕೋವಿಡ್ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಹೋಗದಿದ್ದರೆ ಅವರು ಬಾಲ ಕಾರ್ಮಿಕರಾಗಿ ಬಳಕೆಯಾಗುವ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ಮಕ್ಕಳಿಗೆ ಶಾಲೆಯ ಕಲಿಕೆಯನ್ನು ಮುಂದುವರೆಸಲು ಸರ್ಕಾರ ಯಾವೆಲ್ಲ ಯೋಜನೆಗಳನ್ನು ರೂಪಿಸಿದೆ ಎಂಬುದರ ಮಾಹಿತಿ ನೀಡಬೇಕು ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.
ಅಲ್ಲದೇ, ಕಡ್ಡಾಯ ಶಿಕ್ಷಣ ಕಾಯ್ಗೆ ಅಡಿ ಮಕ್ಕಳಿಗೆ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಶಾಲೆಗಳನ್ನು ಮುಂದವರಿಸಲು ಅಗತ್ಯ ಸುರಕ್ಷತಾ ಕ್ರಮಗಳು ಹಾಗೂ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೇ, ಕೋವಿಡ್ ಬಳಿಕ 9 ಸಾವಿರ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಶಾಲೆ ತೊರೆದಿರುವ ಮಕ್ಕಳನ್ನು ವಾಪಸ್ ಶಾಲೆಗೆ ಕರೆತರಲು ಯಾವೆಲ್ಲ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನೂ ತಿಳಿಸುವಂತೆ ಪೀಠ, ಸರ್ಕಾರಕ್ಕೆ ನಿರ್ದೇಶಿಸಿದೆ.