ತುಮಕೂರು :ಜಿಲ್ಲೆಯಲ್ಲಿಂದು 23 ಜನರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆಯಾಗಿದೆ. ಇತ್ತೀಚೆಗೆ ಇಬ್ಬರು ಮಹಿಳೆಯರು ಸೋಂಕಿಗೆ ಬಲಿಯಾಗಿದ್ದಾರೆ.
ಜಯನಗರ ಬಡಾವಣೆಯ 58 ವರ್ಷದ ಮಹಿಳೆ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಜುಲೈ 16ರಂದು ಮೃತಪಟ್ಟಿದ್ದಾರೆ. ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವನ್ನಪ್ಪಿದ್ದು, ಈ ಮಹಿಳೆಯ ಗಂಟಲು ದ್ರವ ಮಾದರಿಯ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಇನ್ನೂ 23 ವರ್ಷದ ಮಹಿಳೆಯು ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿದ್ದರು. ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಜುಲೈ 13ರಂದು ಮೃತಪಟ್ಟಿದ್ದರು. ಜುಲೈ 9ರಂದು ಇವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. 346 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಹತ್ತು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ತುಮಕೂರು ತಾಲೂಕಿನಲ್ಲಿ 16 ಪ್ರಕರಣ, ಕುಣಿಗಲ್‌ನಲ್ಲಿ ಮೂರು, ಕೊರಟಗೆರೆಯಲ್ಲಿ 2, ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ತಾಲೂಕಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿವೆ. ಕೊರಟಗೆರೆ ತಾಲೂಕಿನಲ್ಲಿ ಗರ್ಭಿಣಿಯೊಬ್ಬರು ಸೋಂಕಿಗೊಳಗಾಗಿದ್ದಾರೆ. ಹತ್ತು ಮಂದಿ ಮಹಿಳೆಯರು, 13 ಮಂದಿ ಪುರುಷರು ಇಂದು ಸೋಂಕಿಗೊಳಗಾದವರು.