ತುಮಕೂರು: ಬೇಸಿಗೆ ಬಂತೆಂದರೆ ಹೆಚ್ಚಿನ ಕಡೆಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಕುಡಿಯುವ ನೀರಿಗಾಗಿ ಮೊದಲೇ ಮುಂಜಾಗ್ರತಾ ಕ್ರಮ ಕೈಗೊಂಡು ಶೇಖರಣೆ ಮಾಡಬೇಕಾಗುತ್ತದೆ. ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಈ ಬಾರಿ ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗುವುದಿಲ್ಲ.
ಸಾಮಾನ್ಯವಾಗಿ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿರುತ್ತದೆ. ಮುಖ್ಯವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ನಿಭಾಯಿಸಲು ಹಾಸನದ ಗೊರೂರಿನ ಹೇಮಾವತಿ ಜಲಾಶಯವನ್ನು ಆಶ್ರಯಿಸಬೇಕಾಗಿದೆ.
ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಹೇಮಾವತಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು. ಹೀಗಾಗಿ ಹಾಸನದ ಗೊರೂರಿನ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ತುಮಕೂರು ಜಿಲ್ಲೆಯ ಬಹುತೇಕ ಕೆರೆ-ಕಟ್ಟೆಗಳಿಗೆ ನಿರೀಕ್ಷೆಯಂತೆ ನೀರು ಹರಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಈಗಾಗಲೇ ಬೇಕಾದಷ್ಟು ನೀರನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ.
ನಗರದ ಮಧ್ಯಭಾಗದಲ್ಲಿರುವ ಅಮಾನಿ ಕೆರೆಗೂ ಕೂಡ ನೀರನ್ನು ಹರಿಸಿಕೊಳ್ಳಲಾಗಿದೆ. ನಗರದ ಸುತ್ತಮುತ್ತಲಿರುವ ಬೋರ್ವೆಲ್ಗಳಲ್ಲಿ ಅಂತರ್ಜಲ ಮಟ್ಟ ಈ ಬಾರಿ ಉತ್ತಮ ಪ್ರಮಾಣದಲ್ಲಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಅಂತರ್ಜಲ ಮಟ್ಟ ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದಾಗಿ ತುಮಕೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.