ತುಮಕೂರು:ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಹೌದು ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆ ಮಾಜಿ ಮುಖ್ಯಮಂತ್ರಿಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ್ದರು.
ಹೆಚ್ಡಿಕೆಗೆ ಎರಡು ದಾಖಲೆ ಗೌರವ: ಆ ಗ್ರಾಮಕ್ಕೆ ಆಗಮಿಸಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರ ಮೋಹಿತ್ ಕುಮಾರ್ ವತ್ಸ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದರು.
ಬೃಹತ್ ಹಾರಗಳ ಗೌರವಕ್ಕೆ ಭಾಜನ:ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರ ಮೋಹಿತ್ ಕುಮಾರ್ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರು ಬೆಳೆದ ಬೆಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ. ಇದು ಮೊದಲ ದಾಖಲೆ ಎಂಬ ಮಾಹಿತಿ ನೀಡಿದರು.
ಸದಾ ದಾಖಲೆಗಳನ್ನು ನಾವು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಬೃಹತ್ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಂದಿನಿಂದ ನಾವು ಖುದ್ದು ಪರಿಶೀಲನೆ ಮಾಡುತ್ತಿದ್ದೆವು. ನಿನ್ನೆ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾಗಿರುವ ಏಕೈಕ ವ್ಯಕ್ತಿ ಕುಮಾರಸ್ವಾಮಿ ಎಂದು ಮೋಹಿತ್ ಕುಮಾರ್ ವಿವರಿಸಿದರು.