ತುಮಕೂರು:ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಮತಬೇಟೆ ಆರಂಭಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿದ್ದಾರೆ. ಅಂತೆಯೇ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಪತರು ನಾಡಿನಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡರು. ಮುಂದಿನ ದಿನಗಳಲ್ಲಿ ಕುಂಚಿಟಿಗ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಪ್ರಚಾರದ ವೇಳೆ ಭರವಸೆ ನೀಡಿದರು. ಜಿಲ್ಲೆಯಾದ್ಯಂತ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸಿ ಮತಬೇಟೆ ವೇಳೆ ಅವರು ಮಾತನಾಡಿದರು.
ಗುಬ್ಬಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿಲೀಪ್ ಪರ ರೋಡ್ ಶೋ ನಡೆಸಿದ ಸಿಎಂ ಅವರು, "ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಿ ಎಲ್ಲಾರಿಗೂ ನ್ಯಾಯ ಕೊಡುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಬಹಳ ವರ್ಷಗಳ ಬೇಡಿಕೆ ಈಡೇರಿಸುವ ಕೆಲಸವನ್ನು ಮಾಡಿದೆ. ನಮ್ಮ ಸರ್ಕಾರದಲ್ಲಿ ಕಾಯಕಯೋಗಿ ಯೋಜನೆ ಜಾರಿಗೆ ತಂದಿದ್ದೇವೆ. ಡಬಲ್ ಇಂಜಿನ್ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಗುಬ್ಬಿಯಲ್ಲಿ 25 ಸಾವಿರ ಜನರಿಗೆ ಕಿಸಾನ್ ಸಮ್ಮಾನ್ ಯೋಜನೆ ಸಿಕ್ಕಿದೆ. ಆಯುಷ್ಮಾನ್ ಯೋಜನೆ, ರೈತ ವಿದ್ಯಾಸಿರಿ ಯೋಜನೆ ಮಾಡಿದ್ದೇವೆ. ಗುಬ್ಬಿಯಲ್ಲಿ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ದಿಲೀಪ್ ಅವರು ಕ್ರಿಯಾಶೀಲ ವ್ಯಕ್ತಿ. ಅವರನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಬೇಕು ಎಂದು ಜನರಲ್ಲಿ ಸಿಎಂ ಬೊಮ್ಮಾಯಿ ಮನವಿ ಮಾಡಿದರು.