ತುಮಕೂರು:ಕೊರಟಗೆರೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಕ್ಯಾಶವಾರದ ನಾಗರಾಜು (68) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಶಾಸಕ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ – ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಘಟಕಗಳ ಅಧ್ಯಕ್ಷರು, ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಕ್ಯಾಶವಾರದ ನಾಗರಾಜು ಅವರು ಕೂಡ ಭಾಗಿಯಾಗಿ ಸಭೆಯಲ್ಲಿ ಭಾಷಣ ಮಾಡಿದ್ದರು. ಇದಾದ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣಕ್ಕೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತರುವ ವ್ಯವಸ್ಥೆ ಮಾಡಲಾಯಿತು. ಆದರೆ, ಅವರು ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.