ತುಮಕೂರು:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸದಸ್ಯರ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ, ಬಲವಂತದ ಅವಿರೋಧ ಆಯ್ಕೆ ಕುರಿತ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ಗಳು ಮತ್ತು ನೋಡೆಲ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಗ್ರಾಪಂಗಳ ಸದಸ್ಯರ ಸ್ಥಾನಗಳಿಗೆ ಹರಾಜು, ಅವಿರೋಧ ಆಯ್ಕೆಯಾಗುವುದಕ್ಕೆ ಒಪ್ಪಂದ ಆಗಿರುವುದರ ಬಗ್ಗೆ ದೂರುಗಳು ಬಂದಲ್ಲಿ ಕೂಡಲೇ ಪರಿಶೀಲನೆ ನಡೆಸಬೇಕು. ಮೇಲ್ನೋಟಕ್ಕೆ ನಿಜವೆಂದು ಕಂಡು ಬಂದರೆ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಿಯಮಾನುಸಾರ ಕ್ರಮಕೈಗೊಳ್ಳಲು ಈಗಾಗಲೇ ಸಬ್ ಡಿವಿಷನ್ ಮ್ಯಾಜಿಸ್ಟ್ರೇಟ್‍ರವರಿಗೆ ನಿರ್ದೇಶನ ಅಲ್ಲದೇ ಪೊಲೀಸ್ ಇಲಾಖೆಗೂ ಸೂಚನೆ ನೀಡಲಾಗಿದೆ ಎಂದರು.
ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿ ಆದೇಶ:
ಹರಾಜು ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ. ತುರುವೇಕೆರೆ ತಾಲೂಕಿನ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟವರ ಮೇಲೆ ಎಫ್‍ಐಆರ್ ದಾಖಲಿಸಿ ಎಂದು ತಹಶೀಲ್ದಾರ್ ಅವರಿಗೆ ಡಿಸಿ ಸೂಚನೆ ನೀಡಿದರು.