ತುಮಕೂರು:ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಹಳ್ಳಿಗಳು ಯಾವುದೇ ಅಭಿವೃದ್ಧಿ ಕಂಡಿಲ್ಲ, ರಸ್ತೆ ಸಂಪರ್ಕ, ಚರಂಡಿ ವ್ಯವಸ್ಥೆ, ಶಾಲಾ ಅಭಿವೃದ್ಧಿ ಆಗದೇ ಇರುವುದು ನನ್ನ ಗಮನಕ್ಕೆ ಬಂದಿದೆ. ಮೂಲಸೌಕರ್ಯಾಭಿವೃದ್ದಿ ನಿಟ್ಟಿನಲ್ಲಿ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆಂದು ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರಿನಲ್ಲಿ ದಿಶಾ ಸಭೆ : ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಮೂಲ ಸೌಕರ್ಯ ಕುರಿತು ಚರ್ಚೆ ಜಿಲ್ಲಾ ಪಂಚಾಯಿತಿಯಲ್ಲಿ ನಡೆದಜಿಲ್ಲಾಭಿವೃದ್ದಿ ಸಹಕಾರ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಮಾತನಾಡಿದ ಅವರು, ಪಾವಗಡ ತಾಲೂಕು ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಅಭಿವೃದ್ಧಿಯಾಗಿಲ್ಲ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗೊಲ್ಲರ ಹಟ್ಟಿಗಳ ಅಭಿವೃದ್ಧಿಗೆ ಮುಂದಾಗಬೇಕು. ಜೊತೆಗೆ ಅವರಲ್ಲಿರುವ ಮೌಢ್ಯತೆ ಬಗ್ಗೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದ್ರು.
ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಮಾತನಾಡಿ, ತುಮಕೂರು ನಗರ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯಡಿ ಸ್ಮಾರ್ಟ್ ಸಿಟಿ ನಿರ್ಮಿಸಲಾಗುತ್ತಿದೆ. ಈಗಾಗಲೇ ಸ್ಮಾರ್ಟ್ ಲಾಂಚ್, ಡಿಜಿಟಲ್ ಲೈಬ್ರರಿ, ಮಲ್ಟಿಡೈಮೆನ್ಷನಲ್ ಆಡಿಟೋರಿಯಂ, ಪೆರಿಫರಲ್ ರಿಂಗ್ ರಸ್ತೆ ನಿರ್ಮಾಣ, ಸ್ಮಾರ್ಟ್ ರಸ್ತೆ, ಬಸ್ ಶೆಲ್ಟರ್, ಅಮಾನಿಕೆರೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು.
ಇನ್ನೂ ಸಭೆಯಲ್ಲಿ ಸಂಸದ ಜಿ.ಎಸ್ ಬಸವರಾಜು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾ ಪಂಚಾಯಿತಿ ಸಿಇಓ ಶುಭಾ ಕಲ್ಯಾಣ್ ಮುಂತಾದ ಅಧಿಕಾರಿಗಳು ಹಾಜರಿದ್ದರು. ಒಂದೆಡೆ ಸಭೆ ನಡೆಯುತ್ತಿದ್ದರೆ ಮತ್ತೊಂದೆಡೆ ಅನೇಕ ಅಧಿಕಾರಿಗಳು ಸಭೆಗೂ ನಮಗೂ ಯಾವುದೇ ಸಂಬಂಧ ಇಲ್ಲವೆಂಬಂತೆ ಫೋನಿನಲ್ಲಿ ಕಾಲ ಕಳೆಯುತ್ತಿದ್ದರು.