ತುಮಕೂರು: ಪರಿಸರ ಎಂದರೆ ನಮ್ಮ ಸುತ್ತಮುತ್ತಲಿರುವ ಗಿಡ-ಮರ, ಪ್ರಾಣಿ-ಪಕ್ಷಿಗಳು ಎಲ್ಲವೂ ಸೇರುತ್ತವೆ. ಇವೆಲ್ಲವನ್ನು ಕಾಪಾಡಿಕೊಂಡು ಹೋಗುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಕೃತಿಯ ಜೊತೆಗೆ ಸಮನ್ವಯದಿಂದ ಸಾಗುವ ಜೊತೆಗೆ ತಮ್ಮ ಕೈಲಾದಷ್ಟು ಸಸ್ಯ ಸಂಕುಲ, ಪ್ರಾಣಿ ಸಂಕುಲವನ್ನು ಬೆಳೆಸೋಣ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಸಿ.ಗಿರೀಶ್ ಕರೆ ಕೊಟ್ಟರು.
ತುಮಕೂರು ಜಿಲ್ಲಾಡಳಿತದಿಂದ ಪರಿಸರ ದಿನಾಚರಣೆ
ತುಮಕೂರಿನ ಅಮಾನಿಕೆರೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಸಸಿಗಳನ್ನು ನೆಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆ ಇವರು ಸಂಯುಕ್ತಾಶ್ರಯದಲ್ಲಿ ನಗರದ ಅಮಾನಿಕೆರೆಯ ಪಾರ್ಕ್ನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಚಾಲನೆ ನೀಡಿದರು. ಈ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಸಿ.ಗಿರೀಶ್ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಈ ವರ್ಷ ಕಾಡಿನಲ್ಲಿ 17 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ. 13,92,000 ಸಸಿಗಳನ್ನು ರೈತರಿಗೆ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.