ತುಮಕೂರು:ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿ ಬಿರುಸಿನ ತಂತ್ರಗಾರಿಕೆ ನಡೆಯುತ್ತಿದೆ. ಆದರೆ, ಪ್ರಾದೇಶಿಕ ಪಕ್ಷ ಜೆಡಿಎಸ್ನಲ್ಲಿ ಮಾತ್ರ ನಾವಿಕನಿಲ್ಲದ ಹಡಗಾಗುತ್ತಿದೆಯೇ ಎಂಬ ಆತಂಕ ಕಾರ್ಯಕರ್ತರಲ್ಲಿ ಮನೆ ಮಾಡಿದೆ.
ಹಾಸನ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವ ಕಂಡು ಕೊಂಡಿರುವಂತೆ ಜಿಲ್ಲೆಯಲ್ಲಿಯೂ ಜೆಡಿಎಸ್ ಭದ್ರ ಬುನಾದಿ ಹಾಕಿಕೊಂಡಿದೆ. ಆದರೆ, ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ಇಲ್ಲಿಂದ ನಿಂತು ಪರಾಭವಗೊಂಡ ಬಳಿಕ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಛಾಪು ಮೂಡಿಸಲು ವಿಫಲವಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಜೆಡಿಎಸ್ ಕಟ್ಟಾಳು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಚಿಕ್ಕನಾಯಕನಹಳ್ಳಿ ಮಾಜಿ ಶಾಸಕ ಸುರೇಶ್ ಬಾಬು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರತೊಡಗಿದೆ.
ಈ ಇಬ್ಬರು ಪ್ರಮುಖ ನಾಯಕರ ವಲಸೆ ಹೋಗುವ ಮನಸ್ಥಿತಿಯಿಂದ ಜಿಪಂ, ತಾಪಂ ಚುನಾವಣೆಯಲ್ಲಿ ಜೆಡಿಎಸ್ ತೀವ್ರ ಹಿನ್ನಡೆ ಅನುಭವಿಸುವ ಸಾಧ್ಯತೆ ಹೆಚ್ಚಳವಾಗಿದೆ. ಇವರಿಬ್ಬರ ಹಿಂದೇಟಿನಿಂದಾಗಿ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂದು ತಲೆಕೆಡಿಸಿಕೊಳ್ಳುವಂತಾಗಿದೆ. ಆದರೆ, ಶಾಸಕ ಶ್ರೀನಿವಾಸ್ ಮಾತ್ರ ತಾನು ಜೆಡಿಎಸ್ ಪಕ್ಷದಲ್ಲೇ ಇರ್ತಿನಿ ಎಂದು ಒಲ್ಲದ ಮನಸ್ಸಿನಿಂದ ಹೇಳುತ್ತಾರೆ.