ತುಮಕೂರು:ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತುಮಕೂರು ಗ್ರಾಮಾಂತರ, ಗುಬ್ಬಿ, ಕುಣಿಗಲ್ ತಾಲೂಕುಗಳಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿಯವರೆಗೂ ಮೂರು ಜನರು ಚಿರತೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇಲ್ಲಿಯವರೆಗೂ ಚಿರತೆಯನ್ನು ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ತುಮಕೂರಿನಲ್ಲಿ ಕರವೇ ಪ್ರತಿಭಟನೆ ಅಲ್ಲಿನ ಗ್ರಾಮಸ್ಥರು ಓಡಾಡಲು, ಹೊಲಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುವಂತಹ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ಚಿರತೆಗಳನ್ನು ಸೆರೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಮಾತನಾಡಿ, ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿಯಲ್ಲಿ ಹಾಗೂ ಕುಣಿಗಲ್ ತಾಲೂಕಿನಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದೆ. ಇನ್ನಾದರು ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚೆತ್ತುಕೊಂಡು ಚಿರತೆಗಳನ್ನು ಸೆರೆ ಹಿಡಿಯುವ ಮೂಲಕ ಗ್ರಾಮಸ್ಥರು ಭಯವಿಲ್ಲದೆ ಓಡಾಡಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.