ತುಮಕೂರು: ದಲಿತರ ಮೇಲೆ ಹೆಚ್ಚುತ್ತಿರುವ ಕೊಲೆ, ಅತ್ಯಾಚಾರ ,ಬಹಿಷ್ಕಾರ ಇವುಗಳನ್ನು ಖಂಡಿಸಿ ಮತ್ತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ದಲಿತರ ಮೇಲೆ ದೌರ್ಜನ್ಯ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ
ದಲಿತರ ಮೇಲೆ ಹೆಚ್ಚುತ್ತಿರುವ ಕೊಲೆ, ಅತ್ಯಾಚಾರ ,ಬಹಿಷ್ಕಾರ ಇವುಗಳನ್ನು ಖಂಡಿಸಿ ಮತ್ತು ದಲಿತರ ಮೇಲೆ ದೌರ್ಜನ್ಯ ನಡೆಸುವವರಿಗೆ ಮರಣದಂಡನೆಯಂತಹ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ದಲಿತರ ಮೇಲೆ ದೌರ್ಜನ್ಯ ನಡೆಸುವವರಿಗೆ ಮರಣದಂಡನೆಯಂತಹ ಶಿಕ್ಷೆ ವಿಧಿಸಬೇಕು. ದೌರ್ಜನ್ಯ, ಕೊಲೆ, ಅತ್ಯಾಚಾರ, ಅಸ್ಪೃಶ್ಯತೆಗಳಂತಹ ಘಟನೆ ನಡೆದ ಸಂದರ್ಭದಲ್ಲಿ ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಶೀಘ್ರ ಪರಿಹಾರ, ಪುನರ್ವಸತಿ ಕಲ್ಪಿಸಬೇಕು.
ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೆ ಮಾಡಿ, ಕೇಂದ್ರಕ್ಕೆ ರಾಜ್ಯ ಸರ್ಕಾರ ಕಳುಹಿಸಬೇಕು. ಎಸ್ಸಿ-ಎಸ್ಟಿ ಜನಾಂಗದವರ ಮೇಲೆ ದೌರ್ಜನ್ಯ ನಡೆಸಿದವರ ಸವರ್ಣೀಯ ಜನಾಂಗದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ನೀಡಬೇಕು ಎಂಬ ಬೇಡಿಕೆಯನ್ನು ಈಡೇರಿಸುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.
ಈ ವೇಳೆ ಮಾತನಾಡಿದ ಪಿ.ಎನ್ ರಾಮಯ್ಯ, ಸವರ್ಣೀಯರು ನಡೆಸುವಂತಹ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ, ಅತ್ಯಾಚಾರ, ಅಸ್ಪೃಶ್ಯತೆಯನ್ನು ಆಚರಣೆ ಮಾಡುತ್ತಿರುವಂತಹವರ ವಿರುದ್ಧ ಇಡೀ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ಕಾನೂನನ್ನು ಜಾರಿಗೊಳಿಸಬೇಕೆಂದು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಾ ಬಂದಿವೆ ಎಂದರು.