ತುಮಕೂರು:ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವ ತನ್ನ ಹೆಂಡತಿ ಮಕ್ಕಳಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆದಿದ್ದಾನೆ. ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಪತಿಯು ತನ್ನ ಹೆಂಡತಿ, ಮಕ್ಕಳಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಅವರು ಜೀವ ಉಳಿಸಿಕೊಳ್ಳಬಾರದೆಂದು ರೂಂಗೆ ಬೀಗ ಹಾಕಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿ ಸಾವು, ಮಕ್ಕಳ ಸ್ಥಿತಿ ಗಂಭೀರ.. ರಾಮಾಂಜಿ ಎಂಬುವನಿಂದ ಕೃತ್ಯ ನಡೆದಿದೆ. ಘಟನೆಯಲ್ಲಿ ಪತ್ನಿ ಶಾಂತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 17 ವರ್ಷ, 13 ವರ್ಷ ಹಾಗೂ ಅಮೃತಾ 10 ವರ್ಷ ವಯಸ್ಸಿನ ಮೂವರು ಹೆಣ್ಣು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಮೂವರಿಗೂ ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿ ರಾಮಾಂಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿಗೆ ಬೆಂಕಿ ಹಚ್ಚಿದ ಪಾಪಿ ಪತಿ: ಮಕ್ಕಳೆದುರಿಗೆ ಗಂಡ ತನ್ನ ಹೆಂಡತಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ ಇತ್ತೀಚೆಗೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ 20 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ನವ್ಯಶ್ರೀ ಘಟನೆಯಲ್ಲಿ ಸಾವನ್ನಪ್ಪಿರುವ ಮಹಿಳೆ. ತಿರುನಗರಿ ನರೇಂದ್ರ ಕೃತ್ಯ ಎಸಗಿದ ಆರೋಪಿ.