ತುಮಕೂರು:ಮಾಸ್ಕ್ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಭಾರತೀಯ ವೈದ್ಯಕೀಯ ಸಂಘದ ಕಚೇರಿವರೆಗೆ ಜನ ಜಾಗೃತಿ ಜಾಥಾ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಜಾಥಾಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಚಾಲನೆ ನೀಡಿದರು.
ತುಮಕೂರಿನಲ್ಲಿ ಮಾಸ್ಕ್ ಡೇ ಜನ ಜಾಗೃತಿ ಜಾಥಾ ಈ ವೇಳೆ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಸರ್ಕಾರ ಆರಂಭದಿಂದಲೂ ಸಾರ್ವಜನಿಕರಿಗೆ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇಂದು ಮಾಸ್ಕ್ ದಿನ ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾಸ್ಕ್ ಧರಿಸುವುದರಿಂದ ಕೋವಿಡ್ ಹರಡುವಿಕೆಯನ್ನು ತಡೆಯಬಹುದು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಆದರೂ, ಜನ ಮಾಸ್ಕ್ ಧರಿಸಿಕೊಂಡು ಸಂಚರಿಸಲು ಆಸಕ್ತಿ ತೋರುತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಈ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಉಮೇಶ್ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ಕಾರ್ಮಿಕ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಎಲ್ಲಾ ಸಿಬ್ಬಂದಿಗೆ ಉಚಿತವಾಗಿ ಮಾಸ್ಕ್, ಆಹಾರದ ಕಿಟ್, ಸ್ಯಾನಿಟೈಸರ್ ನೀಡಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸುವುದರಿಂದ ಕೋವಿಡ್ ಹರಡುವಿಕೆಯನ್ನು ತಡೆಯಬಹುದು. ಆ ಮೂಲಕ ಮುಂದಿನ ಪೀಳಿಗೆಗೆ ಈ ಸೋಂಕು ಹರಡುವುದನ್ನು ತಡೆಯಬೇಕಿದೆ ಎಂದು ತಿಳಿಸಿದರು.
ಜಾಥಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊನ ವಂಶಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನಾಗೇಂದ್ರಪ್ಪ, ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.