ತುಮಕೂರು:ಕೊರೊನಾ ಲಾಕ್ಡೌನ್ನಿಂದ ಕಕ್ಷಿದಾರರು ಹಾಗೂ ವಕೀಲರು ತೊಂದರೆಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ಅವರಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಇ-ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ವಿಷಯ ತಿಳಿಸಿದ ಅವರು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮೋಟಾರು ವಾಹನ ಅಪಘಾತ ಪರಿಹಾರ ಅರ್ಜಿ, ರಾಜಿಯಾಗತಕ್ಕಂತಹ ಕ್ರಿಮಿನಲ್ ಪ್ರಕರಣ, ಸಿವಿಲ್ ದಾವೆ ಮತ್ತು ನೆಗೋಷಿಯಬಲ್ ಇನ್ಸ್ರುಮೆಂಟ್ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಮಾತುಕತೆ ಮೂಲಕ ತೀರ್ಮಾನಗೊಳಿಸುವ ಮೆಗಾ ಇ-ಲೋಕ್ ಅದಾಲತ್ ಅನ್ನು ದೇಶದಲ್ಲಿ ಮೊದಲ ಬಾರಿಗೆ ಸೆಪ್ಟೆಂಬರ್ 19 ರಂದು ಹಮ್ಮಿಕೊಳ್ಳಲಾಗಿದೆ ಎಂದರು.
ಇ-ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳಾದ ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು ಜೊತೆಗೆ ಇತರೆ ಸಿವಿಲ್ ಪ್ರಕರಣಗಳು, ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ) ಮತ್ತು ಇತರೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.