ಕರ್ನಾಟಕ

karnataka

ETV Bharat / state

ಅಧಿಕ ಸೋಂಕಿತರಿರುವ ಗ್ರಾಮಗಳನ್ನು ಲಾಕ್ ಮಾಡುವಂತೆ ಸಚಿವ ಮಾಧುಸ್ವಾಮಿ ಸೂಚನೆ - ಸಚಿವ ಮಾಧುಸ್ವಾಮಿ ಸಭೆ

ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದರು.

Minister Madhuswamy held meeting with officials
ಅಧಿಕಾರಿಗಳೊಂದಿಗೆ ಮಾಧುಸ್ವಾಮಿ ಸಭೆ

By

Published : May 23, 2021, 7:15 AM IST

ತುಮಕೂರು:ಹೆಚ್ಚು ಕೋವಿಡ್ ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಮಾಡಿ, ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಈಗಾಗಲೇ ನಿಗದಿಯಾಗಿರುವ ಮದುವೆಗಳನ್ನು ನಡೆಸಲು ಅನುಮತಿ ನೀಡಿ, ಹೊಸ ಮದುವೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು.

ಸೋಂಕಿತರನ್ನು ಕಡ್ಡಾಯವಾಗಿ ಕೊರೊನಾ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಆರೈಕೆ ಕೇಂದ್ರಕ್ಕೆ ಬರಲು ಹಿಂದೇಟು ಹಾಕುವ ಸೋಂಕಿತರಿಗೆ ಆಯಾ ಸ್ಥಳೀಯ ಜನಪ್ರತಿನಿಧಿಗಳು ಮನವರಿಕೆ ಮಾಡಿ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಗ್ರಾಮಗಳು ಕೊರೊನಾ ಬಾಧಿತ ಪ್ರದೇಶಗಳಾಗದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು.

ಸೋಂಕು ಪತ್ತೆಯಾಗಿರುವ ಗ್ರಾಮಗಳಲ್ಲಿ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಹೋಂ ಐಸೋಲೇಷನ್​ನಲ್ಲಿರುವ ಸೋಂಕಿತರ ಆರೈಕೆಗೆ ಹೆಚ್ಚು ಆದ್ಯತೆ ಕೊಡಬೇಕು. ಸೋಂಕು ದೃಢಪಟ್ಟ ಆರಂಭದ ದಿನದಿಂದಲೇ ಚಿಕಿತ್ಸೆ ನೀಡುವ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು ಎಂದರು.

ಇದನ್ನೂಓದಿ: ಗದಗ್​ ಡಿಹೆಚ್​ಓಗೆ ಸಚಿವರ ತರಾಟೆ: 'ದನಾ ಕಾಯೋಕ್​ ಹೋಗು' ಎಂದ ಸಿ.ಸಿ.ಪಾಟೀಲ

ಪ್ರತಿ ಕೊರೊನಾ ಆರೈಕೆ ಕೇಂದ್ರಗಳಲ್ಲಿಯೂ ಗುಣಮಟ್ಟದ ಆಹಾರ ವಿತರಣೆ ಮಾಡುವುದರ ಜೊತೆಗೆ ಉತ್ತಮ ನಿರ್ವಹಣೆ ಮಾಡಬೇಕು. ಸೋಂಕಿತರಿಂದ ದೂರುಗಳು ಕೇಳಿಬರದಂತೆ ನೋಡಿಕೊಳ್ಳಬೇಕು. ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕರು ಅನಗತ್ಯ ಓಡಾಟ ಮಾಡುತ್ತಿದ್ದಾರೆ. ಅದನ್ನು ತಡೆಯಬೇಕು. ಮುಖ್ಯವಾಗಿ ಜೂಜಾಟದಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಎಲ್ಲಿಯೂ ಸೋಂಕಿತರಿಗೆ ಔಷಧ ಕೊರತೆಯಾಗಬಾರದು. ತಾಲೂಕುವಾರು ನಿಗದಿಪಡಿಸಿದ ಕೋವಿಡ್ ಪರೀಕ್ಷೆಗಳನ್ನು ಮಾಡುವುದರ ಜೊತೆಗೆ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ, ಅವರನ್ನೂ ಪರೀಕ್ಷೆಗೆ ಒಳಪಡಿಸುವ ಕಾರ್ಯ ನಡೆಯಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಆಯಾ ತಾಲೂಕು, ಗ್ರಾಮದ ಜನಪ್ರತಿನಿಧಿಗಳೊಂದಿಗೆ ಕೊರೊನಾ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಅಗತ್ಯವಿದ್ದರೆ ಕೊರೋನಾ ಆರೈಕೆ ಕೇಂದ್ರಗಳನ್ನು ತೆರೆಯಬೇಕು. ಹಳ್ಳಿಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶಿಸಿದರು. ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯವಲ್ಲ. ತಂಬಿಂಗ್​ನಿಂದ ಸೋಂಕು ಹರಡುವ ಸಾಧ್ಯತೆಯಿದೆ. ಹಾಗಾಗಿ, ದಿನಕ್ಕೆ 20-30 ಪಡಿತರದಾರರಿಗೆ ಕೂಪನ್ ನೀಡಿ ಪಡಿತರ ವಿತರಣೆಗೆ ಅಧಿಕಾರಿಗಳು ಕ್ರಮವಹಿಸುವಂತೆ ನಿರ್ದೇಶನ ನೀಡಿದರು.

ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರನ್ನು ಸಿಸಿ ಕೇಂದ್ರಕ್ಕೆ ಸ್ಥಳಾಂತರಿಸಲು ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಆಶಾ, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಜನರು ಸಹಕಾರ ನೀಡದೆ ಬೆದರಿಕೆ ಹಾಕುತ್ತಿದ್ದಾರೆ. ಇದನ್ನು ತಪ್ಪಿಸಲು ಸ್ಥಳೀಯ ಕಾರ್ಯಪಡೆ ನೆರವಿನೊಂದಿಗೆ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಸಿಬ್ಬಂದಿ ಕೊರತೆ ಇದ್ದರೆ ಮೀಸಲು ಪಡೆಯನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಪಲ್ಸ್ ಆಕ್ಸಿಮೀಟರ್, ಸ್ಯಾನಿಟೈಸರ್, ಮಾಸ್ಕ್, ಮಾತ್ರೆ ಸೇರಿದಂತೆ ಮತ್ತಿತರ ಕೋವಿಡ್ ನಿರ್ವಹಣೆಗಾಗಿ ದಾನಿಗಳಿಂದ ನೆರವು ಬಂದಿದೆ. ಕೋವಿಡ್ ನಿರ್ವಹಣೆಗಾಗಿ ಪ್ರತಿ ಪಂಚಾಯತ್​​ಗೆ ಸರ್ಕಾರ ನೀಡಿರುವ ತಲಾ 50,000 ರೂ.ಗಳನ್ನು ಕುಡಿಯುವ ನೀರು ನಿರ್ವಹಣೆಗೆ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್ ಬಾಬು ಸೇರಿದಂತೆ ಇತರರಿದ್ದರು.

ABOUT THE AUTHOR

...view details