ತುಮಕೂರು :ಜಿಲ್ಲೆಯಲ್ಲಿಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಕೈಗೊಂಡಿದ್ದು, ಸಮರ್ಪಕ ಹಾಸಿಗೆ, ಐಸಿಯು ವ್ಯವಸ್ಥೆ ಮತ್ತು ಲಸಿಕೆ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ 2020-21ನೇ ಸಾಲಿನ 4ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪೂರೈಕೆ ಸಮರ್ಪಕವಾಗಿದೆ. ಪ್ರಸ್ತುತ ಲಸಿಕೆ, ಹಾಸಿಗೆಗಳ ಕೊರತೆಯಿಲ್ಲ. ಕೋವಿಡ್ ತಡೆಗೆ ಮನೆ-ಮನೆ ಸರ್ವೆ ಕಾರ್ಯವನ್ನೂ ಮಾಡಲಾಗುತ್ತಿದೆ. ರೋಗ ಲಕ್ಷಣ ಕಂಡು ಬಂದಲ್ಲಿ ಅಂತವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಪಾಸಿಟಿವ್ ಬಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು. ವೈದ್ಯರ ಸಲಹಾ ಚೀಟಿಯಿಲ್ಲದೆ ಮೆಡಿಕಲ್‍ಗಳಲ್ಲಿ ಔಷಧಗಳನ್ನು ನೀಡಬಾರದು. ವಯಸ್ಸಾದವರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ವಿವಿಧ ರೋಗಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಬಳಿಕ ದಾಖಲು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.