ಬೆಂಗಳೂರು: ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಬಾಣಂತಿ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶುಶ್ರೂಷಕರ ಕರ್ತವ್ಯ ಲೋಪ, ನಿರ್ಲಕ್ಷ್ಯತೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಸೇರಿದಂತೆ ನಾಲ್ವರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯನಿರತ ಮೂರು ಮಂದಿ ಶುಶ್ರೂಷಾಧಿಕಾರಿಗಳನ್ನು ತನಿಖೆ ಹಾಗೂ ಶಿಸ್ತುಕ್ರಮ ಬಾಕಿ ಇರಿಸಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಇಂಥ ಅವಘಡಕ್ಕೆ ಕಾರಣವಾಗುವ ವೈದ್ಯ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದೂ ಎಚ್ಚರಿಕೆ ನೀಡಿದೆ.
ಆಸ್ಪತ್ರೆಗಳಿಗೆ ಎಚ್ಚರಿಕೆ:ಎಲ್ಲ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ರವಾನಿಸಲಾಗಿದೆ. ತುರ್ತು ಆರೋಗ್ಯ ಸೇವೆ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲೆಗಳನ್ನು ಪರಿಶೀಲಿಸುತ್ತಾ ಕುಳಿತುಕೊಳ್ಳಬಾರದು. ದಾಖಲೆ ಪರಿಶೀಲನೆ ಮಾಡುವ ಅಗತ್ಯವಿಲ್ಲ. ಆರೋಗ್ಯ ಸೇವೆ ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಪತಿಸ್ಥಿತಿ ಅವಲೋಕನ ಮುಖ್ಯವಲ್ಲ. ಇನ್ನು ಮುಂದೆ ಇಂಥ ಘಟನೆಗೆ ಕಾರಣರಾಗುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದೆಂದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಕಾರಣ ಕೇಳಿ ನೋಟಿಸ್: ಪ್ರಕರಣಕ್ಕೆ ಸಂಬಂಧಿಸಿದಂತೆ, 24 ಗಂಟೆಯೊಳಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸುವಂತೆ ಕಾರಣ ಕೇಳಿ ತುಮಕೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ನೋಟಿಸ್ ಸಹ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ:ಜಿಲ್ಲಾಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪ: ರಕ್ತ ಸ್ರಾವದಿಂದ ಬಾಣಂತಿ.. ಹುಟ್ಟಿದ ಅವಳಿ ಮಕ್ಕಳ ಸಾವು