ತುಮಕೂರು:ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿರುವ ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಪ್ರಸ್ತುತ ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ವಿದ್ಯಾರ್ಥಿಗಳು ದಾಖಲಾತಿಗಾಗಿ ಮುಗಿಬೀಳುತ್ತಿದ್ದಾರೆ. ಅದರಲ್ಲೂ ದೂರದ ಉತ್ತರ ಕರ್ನಾಟಕ ಭಾಗದ ಪೋಷಕರು ತಮ್ಮ ಮಕ್ಕಳನ್ನು ಮಠದಲ್ಲಿ ವಿದ್ಯಾಭ್ಯಾಸಕ್ಕಾಗಿ ದಾಖಲು ಮಾಡಲು ಬಂದು ಕಾದು ಕುಳಿತುಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಮಠದ ವತಿಯಿಂದ ಪ್ರತಿ ವರ್ಷ 10,000 ಮಕ್ಕಳಿಗೆ ಉಚಿತ ಊಟ, ವಸತಿ ಹಾಗೂ ಶಿಕ್ಷಣದ ವ್ಯವಸ್ಥೆ ಮಾಡಲಾಗುತ್ತದೆ. ಇದನ್ನೂ ಮೀರಿ ಹೆಚ್ಚುವರಿ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ವಸತಿ ಸಮಸ್ಯೆ. 8 ಮತ್ತು 9 ನೇ ತರಗತಿಗೆ ವಿದ್ಯಾರ್ಥಿಗಳು ದಾಖಲಾತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದು ಮಠದ ಆಡಳಿತ ಮಂಡಳಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಹೀಗಾಗಿ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮಠದ ಆಡಳಿತ ವರ್ಗ ಚಿಂತನೆ ನಡೆಸುತ್ತಿದೆ.
ಗದಗ, ಬೀದರ್, ಕೊಪ್ಪಳ, ಬಾಗಲಕೋಟೆ, ಹಾವೇರಿ, ಬೆಳಗಾಂ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಬಹುತೇಕ ಬಡ ಮಕ್ಕಳಿಗೆ ಮಠದಲ್ಲಿ ಉತ್ತಮ ಶಿಕ್ಷಣ, ಸಂಸ್ಕಾರ ನೀಡುವ ಸದುದ್ದೇಶದಿಂದ ಶ್ರೀ ಶಿವಕುಮಾರ ಸ್ವಾಮೀಜಿ ಇಂಥದ್ದೊಂದು ಮಹೋನ್ನತ ವ್ಯವಸ್ಥೆ ಕಲ್ಪಿಸಿದ್ದರು. ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಮಠದ ವತಿಯಿಂದ ಉತ್ತಮ ಶಿಕ್ಷಣ ಪಡೆದು ಜೀವನ ರೂಪಿಸಿಕೊಂಡಿದ್ದಾರೆ.