ತುಮಕೂರು: ಶಿರಾ ವಿಧಾನಸಭೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿವೆ. ಇನ್ನು ಇಂದು ಕ್ಷೇತ್ರಕ್ಕೆ ಎಂಟ್ರಿಕೊಟ್ಟ ಜೆಡಿಎಸ್ ನಾಯಕರು ಭರ್ಜರಿ ಭಾಷಣ ಮಾಡುವ ಮೂಲಕ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜಾಗುವಂತೆ ಹುರಿದುಂಬಿಸಿದರು.
ಜೆಡಿಎಸ್ ಅಭ್ಯರ್ಥಿ ಇನ್ನು ಇದುವರೆಗೂ ಘೋಷಣೆಯಾಗದೇ ನಿಗೂಢವಾಗಿಯೇ ಇರಿಸಿರುವ ಪಕ್ಷದ ಮುಖಂಡರು ಇಂದಿನ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ವಿರುದ್ಧ ಗುಡುಗಿದರು. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ದಿವಂಗತ ಸತ್ಯನಾರಾಯಣ ಅವರ ಮಗ ಸತ್ಯಪ್ರಕಾಶ್ ತಮ್ಮ ತಂದೆ ಹೆಸರಿನಲ್ಲಿ ಬಹಿರಂಗ ಸಭೆಯಲ್ಲಿ ಪ್ರಮಾಣ ಮಾಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ತಂದೆ ಮೇಲೆ ಪ್ರಮಾಣ ಮಾಡಿದ ಸತ್ಯನಾರಾಯಣ ಪುತ್ರ ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಜೆಡಿಎಸ್ ಮುಖಂಡರಾದ ಶಿರಾ ಕ್ಷೇತ್ರದಲ್ಲಿ ಜಮಾಯಿಸಿತ್ತು. ಜೆಡಿಎಸ್ ಮುಖಂಡರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಿಲ್ಲೆಯ ಜೆಡಿಎಸ್ ಮಾಜಿ ಹಾಗೂ ಹಾಲಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಪಣತೊಟ್ಟರು.
ಸಭೆಯಲ್ಲಿ ಭಾಗವಹಿಸಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಮಾತನಾಡಿ, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಬೆಂಗಳೂರಿನಲ್ಲಿ ವಾಯುವಿಹಾರ ಸ್ನೇಹಿತರಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ. ಹೀಗಾಗಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮಾತ್ರ ಪೈಪೋಟಿ ಇರುವುದು ಎಂದರು.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಪಡೆಯಲು ಭಾರಿ ಪೈಪೋಟಿ ನಡೆಯುತ್ತಿದೆ. ಈ ನಡುವೆ ಪಕ್ಷದ ಮುಖಂಡ ಕಲ್ಕೆರೆ ರವಿಕುಮಾರ್ ಹಾಗೂ ಮಾಜಿ ಶಾಸಕ ದಿವಂಗತ ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್ ಕೂಡ ಇಂದಿನ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ್ದರು. ಇಬ್ಬರಿಗೂ ವೇದಿಕೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಒಂದು ಹಂತದಲ್ಲಿ ಸತ್ಯಪ್ರಕಾಶ್ ಮಾತನಾಡುತ್ತಾ ಜೆಡಿಎಸ್ ಪಕ್ಷದ ವರಿಷ್ಠರು ಯಾರಿಗೇ ಟಿಕೆಟ್ ಘೋಷಣೆ ಮಾಡಲಿ, ಅವರನ್ನು ನಾನು ಬೆಂಬಲಿಸುತ್ತೇನೆ. ನಮ್ಮ ತಂದೆ ಸತ್ಯನಾರಾಯಣ ಅವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಎಂದು ವೇದಿಕೆ ಮೇಲೆಯೇ ಹೇಳಿದರು.