ತುಮಕೂರು:ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳ ಕ್ಷೇತ್ರದಿಂದ ಜೆಡಿಎಸ್ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಬೆಮೆಲ್ ಕಾಂತರಾಜು ಸದ್ಯ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರಾ ಎಂಬ ಅನುಮಾನ ಕಾಡತೊಡಗಿದೆ.
ಇದಕ್ಕೆ ಪೂರಕ ಎಂಬಂತೆ ಕಳೆದ ಕೆಲ ತಿಂಗಳಿನಿಂದ ಜೆಡಿಎಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳದ ಅವರು, ಕಾಂಗ್ರೆಸ್ ಮುಖಂಡರೊಂದಿಗೆ ಕಾಣಿಸಿಕೊಂಡು ಅಚ್ಚರಿಗೆ ಕಾರಣರಾಗಿದ್ದಾರೆ. ಮುಖ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸರ್ವ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ದಟ್ಟವಾಗುತ್ತಿದೆ.
ಈಗಾಗಲೇ ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ಕೆ.ಎನ್ ರಾಜಣ್ಣ ಹಾಗೂ ಡಾ. ಜಿ.ಪರಮೇಶ್ವರ್ ಅವರೊಂದಿಗೆ ಅನೇಕ ಬಾರಿ ಭೇಟಿಯಾಗಿ ಬೆಮೆಲ್ ಕಾಂತರಾಜು ಮಾತುಕತೆ ನಡೆಸಿರುವುದು ಸಾಕಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿಗೆ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ಅವರ ಮನೆಗೆ ಭೇಟಿ ನೀಡಿ ಕೆಲಕಾಲ ಮಾತುಕತೆ ನಡೆಸಿರುವುದು ಬಹುತೇಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತವಾಗುತ್ತಿದೆ.
ಹೆಚ್ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದ ಕಾಂತರಾಜು
ಇನ್ನೊಂದೆಡೆ, ತುರುವೇಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಬೆಮೆಲ್ ಕಾಂತರಾಜು ಯಾರು ಎಂದು ಆಕ್ರೋಶಭರಿತವಾಗಿ ಮಾತನಾಡಿದ್ದರು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬೆಮೆಲ್ ಕಾಂತರಾಜು ನಾನು 5 ವರ್ಷಗಳ ಕಾಲ ಜೆಡಿಎಸ್ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಹೀಗಿದ್ದರೂ ಹೆಚ್.ಡಿ ಕುಮಾರಸ್ವಾಮಿಯವರು ನನ್ನನ್ನು ಯಾರು ಎಂದು ಹೇಳಿರುವುದು ಸಾಕಷ್ಟು ಬೇಸರ ತರಿಸಿದೆ ಎಂದಿದ್ದರು.
ತರುವೇಕೆರೆಯಲ್ಲಿ ಸಂಘಟನೆ
ಈ ಎಲ್ಲಾ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಬೆಮೆಲ್ ಕಾಂತರಾಜು ಬಹುತೇಕ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ, ಅಲ್ಲದೇ ಈಗಾಗಲೇ ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಘಟನೆಯಲ್ಲಿ ತೊಡಗಿರುವ ಅವರು ಮುಂದಿನ ದಿನಗಳಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿದೆ.
ಈ ಹಿಂದೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕೆ.ಎನ್ ರಾಜಣ್ಣ ಮಗ ರಾಜೇಂದ್ರ ಅವರನ್ನು ಮಣಿಸಿ ಜೆಡಿಎಸ್ ವಿಧಾನಪರಿಷತ್ ಸದಸ್ಯರಾಗಿ ಬೆಮೆಲ್ ಕಾಂತರಾಜು ಗೆಲುವು ಸಾಧಿಸಿದ್ದರು. ಇದೀಗ ಕಣದಲ್ಲಿ ಬಹುತೇಕ ರಾಜೇಂದ್ರ ಅವರಿಗೆ ಈ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಪ್ರಬಲ ಪ್ರತಿಸ್ಪರ್ಧಿ ಇಲ್ಲದಂತಾಗಿದೆ.