ಕರ್ನಾಟಕ

karnataka

ETV Bharat / state

ಮಾಟ-ಮಂತ್ರ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ತುಮಕೂರು ಡಿಸಿ ಖಡಕ್​ ಎಚ್ಚರಿಕೆ

ಇತ್ತೀಚೆಗೆ ಹೆಚ್ಚಿನ ಸಂಖ್ಯೆಯ ಮಕ್ಕಳಲ್ಲಿ ವೈರಲ್ ಫೀವರ್ ಕಂಡುಬರುತ್ತಿದ್ದು, ಫೀವರ್ ತಗುಲಿದ ಬಹುತೇಕ ಮಕ್ಕಳು ಮರಣ ಹೊಂದುವ ಸಾಧ್ಯತೆಗಳಿವೆ. ಆದ್ದರಿಂದ ಜ್ವರ ಕಂಡು ಬಂದ ಮಕ್ಕಳಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.

tumkur
tumkur

By

Published : Sep 26, 2021, 2:01 PM IST

ತುಮಕೂರು: ರೋಗಗಳನ್ನು ಗುಣಪಡಿಸುವುದಾಗಿ ನಂಬಿಸಿ ಪೂಜೆ-ಪುನಸ್ಕಾರ, ಮಾಟ- ಮಂತ್ರ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಹೆಚ್ಚಿನ ಸಂಖ್ಯೆಯ ಮಕ್ಕಳಲ್ಲಿ ವೈರಲ್ ಫೀವರ್ ಕಂಡುಬರುತ್ತಿದ್ದು, ಫೀವರ್ ತಗುಲಿದ ಬಹುತೇಕ ಮಕ್ಕಳು ಮರಣ ಹೊಂದುವ ಸಾಧ್ಯತೆಗಳಿವೆ. ಆದ್ದರಿಂದ ಜ್ವರ ಕಂಡು ಬಂದ ಮಕ್ಕಳಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ರೋಗ ನಿಯಂತ್ರಣಕ್ಕೆ ಸಹಕರಿಸಲು ಮನವಿ:

ಗ್ರಾಮೀಣ ಪ್ರದೇಶದಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆ ನಿರ್ಲಕ್ಷಿಸಿ ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ಗುಣಪಡಿಸಲು ದೇವಸ್ಥಾನಗಳ ಮೊರೆ ಹೋಗುತ್ತಿದ್ದು, ಅಧಿಕಾರಿಗಳು ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ರೋಗ ಗುಣಪಡಿಸಲು ದೇವಸ್ಥಾನಗಳಿಗೆ ಹೋಗದೆ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು. ಮೌಢ್ಯತೆಯಿಂದ ರೋಗ ಗುಣಪಡಿಸುವ ಪ್ರಸಂಗಗಳು ಕಂಡುಬಂದಲ್ಲಿ, ಸಾರ್ವಜನಿಕರು ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ಒದಗಿಸಿ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ಜನರಿಗೆ ಜಾಗೃತಿ :

ಜಿಲ್ಲೆಯಲ್ಲಿ ಹರಡುವ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಲೇರಿಯಾ, ಚಿಕನ್​ ಗುನ್ಯಾ, ಡೆಂಗ್ಯೂ, ಕ್ಷಯರೋಗ, ಮೆದುಳು ಜ್ವರ ಸೇರಿದಂತೆ ಹಲವು ಮಾರಣಾಂತಿಕ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ರೋಗ ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ತಗ್ಗಿದ ಮಲೇರಿಯಾ:

ಕಳೆದ ಎರಡ್ಮೂರು ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಪ್ರಸ್ತುತ ಮಲೇರಿಯಾ ಪ್ರಕರಣಗಳ ಪ್ರಮಾಣ ಗಣನೀಯವಾಗಿ ತಗ್ಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ ಜಿಲ್ಲೆಯಲ್ಲಿ 3 ಮಲೇರಿಯಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಉಳಿದಂತೆ 71 ಡೆಂಗ್ಯೂ, 77 ಚಿಕನ್​ಗುನ್ಯಾ​ ಪ್ರಕರಣಗಳು ವರದಿಯಾಗಿದ್ದು, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಕಳಪೆ ಸ್ಥಿತಿಯಲ್ಲಿರುವ ಬಸ್, ರೈಲ್ವೆ ನಿಲ್ದಾಣ ಹಾಗೂ ಎಪಿಎಂಸಿ ಮಾರುಕಟ್ಟೆಯ ರಸ್ತೆಗಳು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಈ ರಸ್ತೆಗಳಲ್ಲಿ ಕೊಳಚೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದರಲ್ಲದೆ, ಕೆಎಸ್​ಆರ್​ಟಿಸಿ ಅಧಿಕಾರಿಗಳು ನಿರುಪಯುಕ್ತ ಟೈಯರ್​ಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details