ಕರ್ನಾಟಕ

karnataka

ETV Bharat / state

ಜಿಲ್ಲಾ ಮಟ್ಟದ ಅಧಿಕಾರಿಗಳು ವಾರಕ್ಕೆರಡು ಬಾರಿ ತಾಲೂಕಿಗೆ ಭೇಟಿ ನೀಡಿ; ತುಮಕೂರು ಡಿಸಿ ಸೂಚನೆ - ರಾಕೇಶ್​​ ಕುಮಾರ್​​​

ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ರಾಕೇಶ್​​ ಕುಮಾರ್​​ ಮಾತನಾಡಿದರು.

Tumkur DC notices no breach of etiquette in corporations
ಕಾಮಗಾರಿಗಳ ಶಂಕುಸ್ಥಪನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ತುಮಕೂರು ಡಿಸಿ ಸೂಚನೆ

By

Published : Sep 5, 2020, 11:44 PM IST

ತುಮಕೂರು: ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ, ಸಮಾರಂಭ, ಮತ್ತಿತರ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು ವಾರಕ್ಕೆ ಎರಡು ಬಾರಿ ತಾಲ್ಲೂಕುಗಳಿಗೆ ಭೇಟಿ ನೀಡಿ ತಮ್ಮ ಇಲಾಖೆಗಳ ಪರಿಶೀಲನೆ ನಡೆಸಿ, ಭೇಟಿಯ ಪ್ರವಾಸ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಆದೇಶಿಸಿದರು.

ಕಳೆದ ಕೆ.ಡಿ.ಪಿ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ವಾರಕ್ಕೆರಡು ಬಾರಿ ತಾಲ್ಲೂಕುಗಳಿಗೆ ಭೇಟಿ ನೀಡಿ ತಮ್ಮ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಬೇಕು. ತಮ್ಮ ಪ್ರವಾಸ ಕಾರ್ಯಕ್ರಮದ ದಿನಚರಿ ವರದಿಯನ್ನು ಸಲ್ಲಿಸಬೇಕು ಎಂದರು.

ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸಲು ಕ್ರಮವಹಿಸಬೇಕು. ತಮ್ಮ ಹಂತದಲ್ಲಿ ಸಾಧ್ಯವಾಗದಿದ್ದರೆ ಸಮಸ್ಯೆಗಳ ಬಗ್ಗೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಗಮನಕ್ಕೆ ತಂದು ಬಗೆಹರಿಸಲು ಕ್ರಮಕೈಗೊಳ್ಳಬೇಕು. ಒಂದು ವೇಳೆ ತಾಲೂಕು ಮಟ್ಟದಲ್ಲಿ ಬಗೆಹರಿಸಲು ಸಾಧ್ಯವಾಗದ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದ ಕೊರತೆಯಾಗದಂತೆ ಕಾರ್ಯನಿರ್ವಹಿಸಬೇಕು. ಇದು ಯೋಜನೆಯ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳಿಗಿರುವ ಅಡಚಣೆಗಳ ಬಗ್ಗೆ ಪರಿಶೀಲಿಸಿ ವರದಿ ಮಾಡಿ ಎಂದು ಲೋಕೋಪಯೋಗಿ ಇಲಾಖೆಯ ಎಂಜಿನಿಯರುಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್ ಸೇರಿದಂತೆ ಮತ್ತಿತರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details