ತುಮಕೂರು:ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಾರ್ವಜನಿಕರು ಕೂಡ ಸಹಕರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಪೂರಕವಾಗಿ ಮೂಲಭೂತ ಸೌಲಭ್ಯವನ್ನು ಕಲ್ಪಿಸುವುದು ಜಿಲ್ಲಾಡಳಿತದ ಹೊಣೆಯಾಗಿದೆ. ಹೀಗಾಗಿ ಅಧಿಕೃತವಾಗಿಯೇ ಅಗತ್ಯವಿರುವ ಜಲ್ಲಿಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಡಿಸಿ ತಿಳಿಸಿದರು.
ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬೆಂಗಳೂರು ಮತ್ತು ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ಸಾಗಿದೆ. ಈ ಕಾಮಗಾರಿಗೆ ಅಗತ್ಯವಿರುವ ಜಲ್ಲಿಯನ್ನು ಬಳಸಿಕೊಳ್ಳಲು ಅಲ್ಲಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಲಾಗಿದೆ. ಜಲ್ಲಿ ಕ್ರಷರ್ ನಡೆಯುತ್ತಿರುವ ಸ್ಥಳದಲ್ಲಿ ಸುತ್ತಮುತ್ತಲ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ ಇದು ಜಿಲ್ಲೆಯ ಪ್ರಮುಖ ಹೆದ್ದಾರಿ ಕೂಡ ಆಗಿದೆ. ಅಭಿವೃದ್ಧಿ ದೃಷ್ಟಿಯಿಂದ ಸಾರ್ವಜನಿಕರು ಕೂಡ ಸಹಕರಿಸಬೇಕು.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈಗಾಗಲೇ ಬೆಂಗಳೂರು ಮತ್ತು ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಭಾರತ ಮಾಲಾ ಯೋಜನೆಗೆ ಸೇರ್ಪಡೆಗೊಳಿಸಿದ್ದಾರೆ. ಈ ಮೂಲಕ ಇದು ಜಿಲ್ಲೆಯಲ್ಲಿ ಒಂದು ಬಹುದೊಡ್ಡ ಅಭಿವೃದ್ಧಿ ಕೆಲಸವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.