ತುಮಕೂರು: ಕೋವಿಡ್ ಎರಡನೇ ಅಲೆ ಹರಡುವಿಕೆ ಜೋರಾಗಿಯೇ ಇದೆ. ಕೋವಿಡ್ ಸೋಂಕಿತರಿಗೆ ಮತ್ತು ಇತರೆ ಚಿಕಿತ್ಸೆ ಸಲುವಾಗಿ ಬೆಡ್ಗಳ ಕೊರತೆಯಾಗದಂತೆ ಮೆಡಿಕಲ್ ಕಾಲೇಜುಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಂಡಿದೆ. ಜತೆಗೆ ಐಸೋಲೇಷನ್ ಕೇಂದ್ರವನ್ನು ತೆರೆಯಲು ತುಮಕೂರು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ದಿನೇ - ದಿನೆ ಸೋಂಕು ಪ್ರಕರಣಗಳು ತೀವ್ರವಾಗಿ ಏರುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ಗಳ ಮೂಲಕ ಪೀಕ್ಷಾ ಪ್ರಮಾಣವನ್ನೂ ಹೆಚ್ಚು ಮಾಡಲಾಗಿದೆ. ಸೋಂಕಿತರು ಮತ್ತು ಸಾಮಾನ್ಯ ರೋಗಿಗಳು ಹೆಚ್ಚಾಗಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದು, ಆಸ್ಪತ್ರೆ ಸಿಬ್ಬಂದಿ ಕಾರ್ಯ ಹೆಚ್ಚಿದೆ.
ತುಮಕೂರು ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅನ್ಯ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಳೆದ ವರ್ಷ ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡ ಸಂದರ್ಭದಲ್ಲಿ ರೋಗಿಗಳಿಂದ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಯಿತು ಎಂಬ ಆರೋಪಗಳು ಈಗಾಗಲೇ ದಟ್ಟವಾಗಿದೆ. ಆದರೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ತುಮಕೂರು ಜಿಲ್ಲಾಡಳಿತ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ.