ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಅವರಿಗೆ ಪರ್ಯಾಯ ನಾಯಕನ ಹುಡುಕಾಟದಲ್ಲಿ ಜೆಡಿಎಸ್ ನಿರತವಾಗಿದೆ ಎಂಬೆಲ್ಲಾ ಮಾತುಕತೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಅ.25ರಂದು ನಡೆಯಲಿರುವ ಸಮಾವೇಶಕ್ಕೆ ಶಾಸಕರಿಗೆ ಆಹ್ವಾನಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನಾಗರಾಜ್ ಈ ಸಮಾವೇಶದಲ್ಲಿ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರನ್ನೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಬಿಂಬಿಸುವ ಪಕ್ಷದ ಮುಖಂಡರ ವ್ಯವಸ್ಥಿತ ತಂತ್ರ ಇದರಲ್ಲಿ ಅಡಗಿದೆ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ಹೇಳುವಂತೆ ಈಗಾಗಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ಅವರಿಗೂ ಕೂಡ ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದಿದ್ದಾರೆ. ಜಿಲ್ಲೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷವನ್ನು ಸದೃಢಗೊಳಿಸಲು ಕಾರ್ಯತಂತ್ರದೊಂದಿಗೆ ಸಮಾವೇಶವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಮಾಜಿ-ಹಾಲಿ ಜೆಡಿಎಸ್ ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.