ಉಡುಪಿ:ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನವೂ ಕೂಡಾ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಈ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯ ಯಡ್ತಾಡಿ ಮನೆ ಸಂಪೂರ್ಣ ಕುಸಿದು ಬಿದ್ದಿದ್ದು, ಮೂವರು ಅಪಾಯದಿಂದ ಪಾರಾಗಿದ್ದಾರೆ. ಮೂವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಘಟನೆ ನಡೆದ ಪ್ರದೇಶಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕೂಡಲೇ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದ್ದಾರೆ.
ಅಲ್ಲದೇ ಜಿಲ್ಲೆಯ ಹಂಗಾರಕಟ್ಟೆ ಬಾಳೇ ಕುದ್ರುವಿನಲ್ಲಿ ಟ್ರಾನ್ಸ್ಫಾರ್ಮರ್ ಕಂಬ ಬಿದ್ದು ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ಉಡುಪಿ ನಗರ, ಕಾರ್ಕಳ, ಕುಂದಾಪುರ, ಬೈಂದೂರು ಭಾಗದಲ್ಲಿ ಮರಗಳು ಬಿದ್ದು ಸಾಕಷ್ಟು ಹಾನಿ ಸಂಭವಿಸಿದೆ. ಸಂಚಾರಕ್ಕೂ ಕೂಡಾ ತೊಂದರೆಯಾಗಿದ್ದು ಯಾವುದೇ ಜೀವಹಾನಿ ಸಂಭವಿಸಿಲ್ಲ.
ಮುಂದಿನ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ, ಸಮುದ್ರ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಮೂರು ದಿನ ಮೀನುಗಾರಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಪ್ರವಾಸಿಗರು, ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನದಿಪಾತ್ರದ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.