ಉಡುಪಿ: ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ನಾನು ಮತ್ತು ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ. ನಮಗೆ ಹಿಂದೆಂದೂ ಇಲ್ಲದ ಸ್ವಾಗತ ಸಿಕ್ಕಿದೆ. ಕರಾವಳಿ ಭಾಗದಲ್ಲಿ ನೂರಕ್ಕೆ ನೂರು ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಅಶ್ಲೀಲ ಪದ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ನವರು ಇದನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಬಿಎಸ್ವೈ ಸಲಹೆ ನೀಡಿದರು.