ಧಾರವಾಡ :ಬರುವ ಜೂನ್ 25ರಿಂದ ಪ್ರಾರಂಭವಾಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುಗಮವಾಗಿ ನಡೆಯಬೇಕು. ಯಾವುದೇ ಒಬ್ಬ ವಿದ್ಯಾರ್ಥಿಯೂ ಕೂಡಾ ಪರೀಕ್ಷೆಯಿಂದ ವಂಚಿತರಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್/ಜುಲೈ 2020ರ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯ ವಾಸಸ್ಥಳದ ಮಾಹಿತಿ ಪಡೆದು ಸಾರಿಗೆ ವಾಹನಗಳ ಮಾರ್ಗ ನಕ್ಷೆ ಸಿದ್ಧಪಡಿಸಿ ಸೌಕರ್ಯ ಒದಗಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಆಸನಗಳ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳು ಘೋಷಿತ ಕಂಟೇನ್ಮೆಂಟ್ ವಲಯದಲ್ಲಿ ಇರುವುದಿಲ್ಲ. ಯಾವುದೇ ಪರೀಕ್ಷಾ ಕೇಂದ್ರಗಳು ಕ್ವಾರಂಟೈನ್ ಕೇಂದ್ರವಾಗಿ ಬಳಕೆಯಾಗಿಲ್ಲ. ಪರೀಕ್ಷೆ ಆರಂಭವಾದ ನಂತರ ಯಾವುದಾದರೂ ಪರೀಕ್ಷಾ ಕೇಂದ್ರಗಳು ಕಂಟೇನ್ಮೆಂಟ್ ವ್ಯಾಪ್ತಿಗೆ ಒಳಪಡುವ ಸಾಧ್ಯತೆಗಳಿದ್ದರೆ ತಕ್ಷಣ ಪರ್ಯಾಯ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಪರೀಕ್ಷೆಗಳನ್ನು ನಿಗದಿತ ದಿನಾಂಕಗಳಂದು ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಾಗಬಾರದು ಎಂದಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ಹಂಚಾಟೆ ಮಾತನಾಡಿ, ಜಿಲ್ಲೆಯಲ್ಲಿ 27,841 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 90 ಪರೀಕ್ಷಾ ಕೇಂದ್ರಗಳು ಹಾಗೂ 17 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲಾ 90 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಮುಖ್ಯ ಅಧೀಕ್ಷಕರು, ಮೊಬೈಲ್ ಸ್ವಾಧೀನಾಧಿಕಾರಿಗಳು, ಕಸ್ಟೋಡಿಯನ್ ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.