ಉಡುಪಿ:ನಗರದ ಖಾಸಗಿ ಕಾಲೇಜೊಂದರ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿಆರ್ಒ) ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದರು.
ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪಿಆರ್ಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ಸ್ಥಳಕ್ಕೆ ಕರೆಸುವಂತೆ ಒತ್ತಾಯಿಸಿದರು.