ಉಡುಪಿ/ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಾಣ ಮಾಡಲಾಗುವುದು ಎಂದು ಟ್ರಸ್ಟ್ ಪ್ರಮುಖರ ಮಹತ್ವದ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ಜರುಗಿದ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದ ಟ್ರಸ್ಟಿನ ವಿಶ್ವಸ್ಥ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಈ ಬಗ್ಗೆ ತಿಳಿಸಿದ್ದಾರೆ.
ನೀಲಿ ಮಿಶ್ರಿತ ಶ್ವೇತಶಿಲೆಯ ಬಾಲ ರಾಮನ ವಿಗ್ರಹ ನಿರ್ಮಾಣ ಮಾಡಲಾಗುವುದು ಎಂದು ಸಮಿತಿಯಲ್ಲಿ ನಿರ್ಣಯ ಮಾಡಲಾಗಿದೆ. ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪನೆಗೆ ತೀರ್ಮಾನ ಮಾಡಲಾಗಿದೆ. ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿಗಳಾದ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ, ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗಿಯಾಗಿದ್ದರು.
ಮಂದಿರ ನಿರ್ಮಾಣಕ್ಕೆ 400ಕೋಟಿ ವೆಚ್ಚದ ಅಂದಾಜು ಮಾಡಲಾಗಿತ್ತು. ಆದರೆ ಜಿಎಸ್ಟಿ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ತಗಲಬಹುದೆಂದು ಅಂದಾಜು ಮಾಡಲಾಗಿದೆ. ಮಂದಿರಕ್ಕಾಗಿ ದೇಶಾದ್ಯಂತ ಭಕ್ತರಿಂದ ಪ್ರತಿ ತಿಂಗಳು 50 ಲಕ್ಷಕ್ಕೂ ಅಧಿಕ ದೇಣಿಗೆ ಸಂಗ್ರಹವಾಗಿದೆ. ಈವರೆಗೆ ಅಂದಾಜು 300 ಕೋಟಿ ರೂಪಾಯಿ ಖರ್ಚು ಆಗಿದೆ. ಸಾರ್ವಜನಿಕ ದೇಣಿಗೆಯಿಂದಲೇ ಖರ್ಚು ಭರಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಲಾಗಿದೆ.