ಕಾರವಾರ:ಪ್ರತಿನಿತ್ಯ ಅವರಿವರು ಆಯೋಜಿಸುವ ಕಾರ್ಯಕ್ರಮಗಳನ್ನೆ ಸುದ್ದಿಮಾಡಿ ಬಿತ್ತರಿಸುತ್ತಿದ್ದ ಪತ್ರಿಕರ್ತರು, ಇಂದು ಪತ್ರಿಕಾ ದಿನಾಚರಣೆ ಅಂಗವಾಗಿ ವಿಶಿಷ್ಟ ಕಾರ್ಯಕ್ರಮವೊಂದನ್ನು ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ.
ಉತ್ತರಕನ್ನಡ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತ ಸಂಘವೂ ಪ್ರತೀ ವರ್ಷ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಈ ಬಾರಿ ಕೂಡ ಮುಂದುವರಿಸಿದೆ. ಸತ್ಯಸಾಯಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಬರ್ಡ್ ಕಾಲೋನಿಯ ನಿರಾಶ್ರಿತರಿಗೆ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿ ಪತ್ರಿಕಾ ದಿನಾಚರಣೆಯನ್ನು ಆಚರಿಸಿದೆ.
ಇನ್ನು ಕಾರ್ಯಕ್ರಮವನ್ನ ಶಾಸಕಿ ರೂಪಾಲಿ ನಾಯ್ಕ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲಿ ಪತ್ರಕರ್ತರು ಕಾರ್ಯಕ್ರಮವನ್ನು ಆಯೋಜಿಸಿ ಸಾಮಾನ್ಯ ನಾಗರೀಕರ ಆರೋಗ್ಯ ತಪಾಸಣೆ ನಡೆಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಠಾಗೋರ್ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇನ್ನು ಈ ಹಿಂದೆ ಪತ್ರಕರ್ತರ ಸಂಘವು ಶಾಲಾ ವಿದ್ಯಾರ್ಥಿಗಳಿಗೆ ಪಾದರಕ್ಷೆ ನೀಡಿತ್ತು. ಈ ಬಾರಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ನೀಡಲಾಯಿತು.
ಒಟ್ಟಿನಲ್ಲಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ಬಾರಿಯೂ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.