ಕಾರವಾರ (ಉ.ಕ):ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ಮಾಸಿಕ ಗೌರವಧನ ಹಾಗೂ ಸುರಕ್ಷಾ ಉಪಕರಣ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಇಸಿ ಸಂಘಟನೆ ನೇತೃತ್ವದಲ್ಲಿ ಕಳೆದ 20 ದಿನಗಳಿಂದ ರಾಜ್ಯದಾದ್ಯಂತ ಕೆಲಸ ಸ್ಥಗಿತಗೊಳಿಸಿ ನಡೆಸುತ್ತಿದ್ದ ಪ್ರತಿಭಟನೆಯ ಭಾಗವಾಗಿ ಕಾರವಾರದಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ್ದಲ್ಲದೆ, ಕಚೇರಿ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಡೆಹಿಡಿದಿದ್ದಾರೆ.
ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕಳೆದ 20 ದಿನಗಳಿಂದ ಕೊಟ್ಟಿರುವ ಭರವಸೆ ಈಡೇರಿಸುವಂತೆ ಒತ್ತಾಯಿಸುತ್ತಿದ್ದರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ನಾವು ಜನರಿಗೋಸ್ಕರ ಕೆಲಸ ಮಾಡುತ್ತಿರುವವರು. ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಕಷ್ಟು ಶ್ರಮ ವಹಿಸುತ್ತಿದ್ದೇವೆ. ಆದರೆ ಈವರೆಗೂ ನಮ್ಮ ಸುರಕ್ಷತೆಗೆ ಯಾವುದೇ ಸಾಧನ ನೀಡಿಲ್ಲ. ಪಿಪಿಇ ಕಿಟ್ ನೀಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪ್ರತಿ ಯೋಜನೆಯನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಮಾತ್ರವಲ್ಲದೆ ಮಕ್ಕಳು, ಗರ್ಭಿಣಿಯರು ಸೇರಿದಂತೆ ಎಲ್ಲರ ಆರೋಗ್ಯದ ಬಗ್ಗೆಯೂ ನಿಗಾ ಇಟ್ಟು ದುಡಿಯುತ್ತಿದ್ದೇವೆ. ಇಷ್ಟಾದರೂ ನಮಗೆ ಕೇವಲ ಮೂರರಿಂದ ನಾಲ್ಕು ಸಾವಿರ ರೂ. ನೀಡಲಾಗುತ್ತಿದೆ. ಇದರಿಂದ ನಮ್ಮ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ನಮಗೆ ಮಾಸಿಕ 12 ಸಾವಿರ ರೂಪಾಯಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಬಳಿಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಆಶಾ ಕಾರ್ಯಕರ್ತೆಯರು, ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಡೆದಿದ್ದು, ನಂತರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.