ಕಾರವಾರ(ಉತ್ತರ ಕನ್ನಡ):ಯುವಕ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿಂದು ಕಾಂಗ್ರೆಸ್ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.
ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜಿಸಲಾಗಿರುವ ಸಮಾವೇಶದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ ಆರ್ ವಿ ದೇಶಪಾಂಡೆ, ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಸೇರಿದಂತೆ ಹಿರಿಯ ಮುಖಂಡರು ಭಾಗಿಯಾಗಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದ್ದು, ಕಾರ್ಯಕರ್ತರಿಗಾಗಿ 20 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.
ಜನಜಾಗೃತಿಗೆ ಮುಂದಾದ ಕಾಂಗ್ರೆಸ್ ಸಮಾವೇಶ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ ನೇತೃತ್ವದಲ್ಲಿ ಮೂವರು ಡಿವೈಎಸ್ಪಿ, 8 ಇನ್ಸ್ಪೆಕ್ಟರ್, 30 ಪಿಎಸ್ಐ ಸೇರಿ 250ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ:ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ ಪರೇಶ್ ಮೇಸ್ತಾ ತಂದೆ
ಇನ್ನು, ಮುಂಜಾಗ್ರತಾ ಕ್ರಮವಾಗಿ 2 ಕೆಎಸ್‌ಆರ್‌ಪಿ ತುಕಡಿ, 2 ಡಿಎಆರ್ ತುಕಡಿ, ಗಲಾಟೆ ನಿರ್ವಹಣೆ ತಂಡ, ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ನಿಯೋಜನೆ ಮಾಡುವ ಮೂಲಕ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ.