ಕಾರವಾರ: ಜುಲೈ 30 ಮತ್ತು 31ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು 2 ಗಂಟೆ ಮುಂಚಿತವಾಗಿಯೇ ಹಾಜರಾಗುವಂತೆ ಜಿಲ್ಲಾಧಿಕಾರಿ ಡಾ. ಹರೀಶ್‌ಕುಮಾರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆ ಸಿದ್ಧತೆ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಹಾಗೂ ಪರೀಕ್ಷಾ ಕೇಂದ್ರಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಈ ವರ್ಷ ಕೋವಿಡ್-19 ವಿಶೇಷ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ 2 ಗಂಟೆ ಮುಂಚಿತವಾಗಿ ಪರೀಕ್ಷೆಗೆ ಹಾಜರಿರುವಂತೆ ನೋಡಿಕೊಳ್ಳಬೇಕು.
ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್-19 ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ ಎಂದಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿವರ್ಷ 7 ಪರೀಕ್ಷಾ ಕೇಂದ್ರಗಳನ್ನು ತೆಗೆಯಲಾಗುತ್ತಿತ್ತು. ಆದರೆ, ಈ ವರ್ಷ ಕೋವಿಡ್-19 ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕಾಗಿ 12 ಪರೀಕ್ಷಾ ಕೇಂದ್ರಗಳನ್ನು ತೆಗೆಯಲಾಗುತ್ತಿದೆ.
ಅಂಕೋಲಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 168, ಭಟ್ಕಳದ ಅಂಜುಮನ್ ಪಿಯು ಕಾಲೇಜು 264, ದಾಂಡೇಲಿಯಲ್ಲಿ ಬಂಗೂರ್ ನಗರ ಸಂಯುಕ್ತ ಪದವಿ ಪೂರ್ವ ಕಾಲೇಜು 264, ಹಳಿಯಾಳದಲ್ಲಿ ಶಿವಾಜಿ ಪದವಿ ಪೂರ್ವ ಕಾಲೇಜು 144, ಹೊನ್ನಾವರದ ಎಂಪಿಇಎಸ್ ಎಸ್‍ಡಿಎಂ ಪಿಯು ಕಾಲೇಜಿನಲ್ಲಿ 240 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಉಳಿದಂತೆ ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 264 ಮತ್ತು ಶಿವಾಜಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 336, ಕುಮಟಾದ ಡಾ.ಎ ವಿ ಬಾಳಿಗಾ ಪದವಿ ಪೂರ್ವ ಕಾಲೇಜಿನಲ್ಲಿ 408 ಮತ್ತು ಸರ್ಕಾರಿ ಹನುಮಂತ ಬೆಣ್ಣೆ ಪದವಿ ಪೂರ್ವ ಕಾಲೇಜಿನಲ್ಲಿ 312, ಶಿರಸಿಯ ಎಂಇಎಸ್ ಪಿಯು ಕಾಲೇಜು 336 ಮತ್ತು ಮಾರಿಕಾಂಬಾ ಪದವಿ ಪೂರ್ವ ಕಾಲೇಜು 528 ಹಾಗೂ ಎಂಇಎಸ್ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ 240ರಂತೆ ಒಟ್ಟು 3,504 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.