ಕಾರವಾರ: ರಾಜ್ಯದಲ್ಲಿ ಕೊನೆಗೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿದೆ. ಜೂನ್ 25 ರಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದ್ದು, ಜುಲೈ 4 ರಂದು ಮುಕ್ತಾಯವಾಗಲಿದೆ. ಆದರೆ ಇದೀಗ ಮಳೆಗಾಲ ಆರಂಭವಾಗಿದ್ದು, ಅದರಲ್ಲೂ ಗುಡ್ಡಗಾಡು ಪ್ರದೇಶಗಳಿಂದ ಕೂಡಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರುವುದು ಶಿಕ್ಷಣ ಇಲಾಖೆಗೆ ಸವಾಲಾಗಿದೆ.
ರಾಜ್ಯದಲ್ಲಿ ಈ ಬಾರಿ ಕೊರೊನಾ ವಕ್ಕರಿಸಿದ ಪರಿಣಾಮ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಹಾಗೂ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಇದೀಗ ಎರಡು ತಿಂಗಳ ಬಳಿಕ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಕಾರವಾರ ಹಾಗೂ ಶಿರಸಿ ಎರಡು ಶೈಕ್ಷಣಿಕ ಜಿಲ್ಲೆಗಳನ್ನ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ, ಪರೀಕ್ಷೆ ಆಯೋಜಿಸುವುದರ ಜೊತೆಗೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ಇದೀಗ ಶಿಕ್ಷಣ ಇಲಾಖೆ ಪ್ಲಾನ್ ರೂಪಿಸಿದೆ.
ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 9,665 ಮಂದಿ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ಎದುರಿಸಲಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 10,100 ಮಂದಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳು ಹಾಗೂ ಗುಡ್ಡಗಾಡು ಪ್ರದೇಶಗಳೇ ಉತ್ತರಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಕರೆತರಲು ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಜೊತೆಗೆ ಬಸ್‌ಗಳು ತೆರಳಲಾಗದ ಪ್ರದೇಶಗಳಿಗೆ, ಖಾಸಗಿ ವಾಹನಗಳನ್ನು ಸಹ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎನ್ನುತ್ತಾರೆ ಅಧಿಕಾರಿಗಳು.