ಕಾರವಾರ: ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಇದ್ದು ರಾಜಕೀಯ ಪಕ್ಷಗಳು ಅಧಿಕಾರದ ಗದ್ದುಗೆ ಏರಲು ಸಿದ್ಧತೆಗೆ ಮುಂದಾಗಿವೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಾಳಯ ಮುಗ್ಗರಿಸಲು ಕಾರಣವಾಗಿದ್ದ ಹೊನ್ನಾವರದ ಯುವಕ ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಿಬಿಐಬಿ ರಿಪೋರ್ಟ್ ಸಲ್ಲಿಕೆಯನ್ನೇ ಬಿಜೆಪಿ ವಿರುದ್ಧ ಚುನಾವಣಾ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಜನಜಾಗೃತಿ ಸಮಾವೇಶದ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಲು ಕಾಂಗ್ರೆಸ್ ಮುಂದಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಅದರಲ್ಲೂ ಉತ್ತರಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚುವಂತಾಗಿತ್ತು. ಹೊನ್ನಾವರದ ಯುವಕ ಪರೇಶ್ ಮೇಸ್ತಾ ಸಾವು ಪ್ರಕರಣದಿಂದ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕೇವಲ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಂಡಿತ್ತು.
ಕಾಂಗ್ರೆಸ್ ಕಪಿಮುಷ್ಟಿಯಲ್ಲಿದ್ದ ಜಿಲ್ಲೆಯಲ್ಲಿ ಪರೇಶ್ ಮೇಸ್ತಾ ಪ್ರಕರಣವನ್ನ ಹಿಂದೂ ಕಾರ್ಯಕರ್ತನ ಹತ್ಯೆ ಎಂದೇ ಬಿಂಬಿತವಾಗಿತ್ತು. ಆದರೆ ಕಳೆದ ಸುಮಾರು ನಾಲ್ಕೂವರೆ ವರ್ಷಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಇದೀಗ ಪರೇಶ್ ಮೇಸ್ತಾನದ್ದು ಕೊಲೆಯಲ್ಲ ಸಹಜ ಸಾವು ಎಂದು ಬಿ ರಿಪೋರ್ಟ್ ಸಲ್ಲಿಸಿದೆ.
ಇದೇ ಪ್ರಕರಣವನ್ನ ಮುಂದಿಟ್ಟುಕೊಂಡು ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡಲು ನಾಳೆ ಕುಮಟಾದ ಮಣಕಿ ಮೈದಾನದಲ್ಲಿ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ. ಈಗಾಗಲೇ ಸಮಾವೇಶದ ಭರದ ಸಿದ್ಧತೆಗಳು ನಡೆಯುತ್ತಿದ್ದು ಪಕ್ಷದ ಹಿರಿಯ ಮುಖಂಡರುಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.