ಕಾರವಾರ: ಉತ್ತರಕನ್ನಡ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ ಜೋರಾಗಿದ್ದು, ಕಾರವಾರದ ನೌಕಾನೆಲೆ ಎದುರು ಹೆದ್ದಾರಿ ಮೇಲೆ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಕದ್ರಾ ಜಲಾಶಯ ಭರ್ತಿ ಸಾಧ್ಯತೆ - ಉತ್ತರ ಕನ್ನಡ ಜಿಲ್ಲೆಯ ಕಾರವಾರ
ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು,ವಾಹನ ಸವಾರರು ಪರದಾಡುವಂತಾಗಿದೆ.
ಕರಾವಳಿಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ಸುರಿಯುತ್ತಿದ್ದು, ನಗರದಲ್ಲಿ ಅತೀ ಹೆಚ್ಚು ಮಳೆ ಬೀಳುತ್ತಿದೆ. ನಗರದಲ್ಲಿ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಕಾಲುವೆಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ತಾಲೂಕಿನ ಕದ್ರಾ ಜಲಾಶಯ ವ್ಯಾಪ್ತಿಯಲ್ಲಿ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಈ ಹಿನ್ನೆಲೆ ಕದ್ರಾ ಜಲಾಶಯದಿಂದ ಯಾವುದೇ ಸಂದರ್ಭದಲ್ಲಿ ನೀರು ಬಿಡುವ ಸಾಧ್ಯತೆಗಳಿದ್ದು, ಕಾಳಿ ನದಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದಲ್ಲದೆ ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ಸಾಕಷ್ಟು ಮಳೆ ಸುರಿಯುತ್ತಿದೆ. ಇನ್ನು ಘಟ್ಟದ ಮೇಲಿನ ಪ್ರದೇಶಗಳಾದ ಶಿರಸಿ, ಸಿದ್ದಾಪುರ, ಮುಂಡಗೋಡ ಹಾಗೂ ಯಲ್ಲಾಪುರ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ.