ಕಾರವಾರ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯ ಸಮಸ್ಯೆ, ಸೌಕರ್ಯದ ಕೊರತೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಪಶ್ಚಿಮ ವಲಯದ ಪೊಲೀಸ್ ಮಹಾ ನಿರ್ದೆಶಕ ಡಾ.ಚಂದ್ರಗುಪ್ತ ತಿಳಿಸಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿದ ನೀಡಿ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ಸ್ವತಃ ಭೇಟಿ ನೀಡುತ್ತಿದ್ದೇನೆ. ಅಲ್ಲಿ ಮೂಲ ಸೌಕರ್ಯ ಕೊರತೆ ಹಾಗೂ ಸಿಬ್ಬಂದಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ ಎಂದರು.
ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸದ ಕುರಿತು ಗಮನಕ್ಕೆ ತಂದಾಗ, ಎಲ್ಲಾ ಪೊಲೀಸ್ ಠಾಣೆಗಳ ಸಿಸಿ ಟಿವಿಗಳ ಒಂದೂವರೆ ವರ್ಷದ ವಿಡಿಯೋಗಳು ಲಭ್ಯವಿದೆ. ಕೆಲವೊಮ್ಮೆ ಕ್ಯಾಮರಾಗಳು ಕೆಟ್ಟಿದ್ದರೂ ಅವುಗಳನ್ನು ಶೀಘ್ರವೇ ದುರಸ್ತಿ ಮಾಡಲಾಗುತ್ತಿದೆ. ಠಾಣೆಯ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿ ಠಾಣೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ನೀಡುತ್ತೇವೆ. ಜಿಲ್ಲೆಯ ಪ್ರವಾಸಿ ತಾಣಗಳ ಭದ್ರತೆಯ ಕುರಿತು ಎಚ್ಚರ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆಗೆ ಸಂಬಂಧಿಸಿದಂತೆ ಚೆಕ್ ಪೋಸ್ಟ್‌ಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಸೂಚನೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ನಿಗಾ ವಹಿಸುತ್ತಿದೆ. ಆದರೂ ಅಕ್ರಮ ಸಾಗಾಟ ನಡೆಯುತ್ತಿರುವುದರಿಂದ ಚೆಕ್ ಪೋಸ್ಟ್‌ಗಳಲ್ಲಿ ಹೆಚ್ಚಿನ ಭದ್ರತೆ ನೀಡುತ್ತೇವೆ. ಅಲ್ಲಿನ ಕೆಲವು ಸಿಸಿ ಕ್ಯಾಮರಾಗಳು ಹಾಳಾಗಿವೆ. ಈ ಬಗ್ಗೆ ಚೆಕ್‌ಪೋಸ್ಟ್ ವ್ಯಾಪ್ತಿ ಗ್ರಾಮ ಪಂಚಾಯಿತಿ ಹಾಗು ಸ್ಥಳೀಯ ಸಂಸ್ಥೆಗಳಿಗೂ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.