ಕಾರವಾರ(ಉತ್ತರ ಕನ್ನಡ): ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಕಳೆದ ಮೂರ್ನಾಲ್ಕು ದಿನಗಳಲ್ಲೇ ನೂರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಆದರೆ ಹೀಗೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸುವುದು ಸವಾಲಾಗಿ ಪರಿಣಮಿಸಿದ್ದು, ಸೂಕ್ತ ರೀತಿಯಲ್ಲಿ ಕೊರೊನಾ ಸೋಂಕಿತರ ನಿರ್ವಹಣೆ ಮಾಡಲು ಜಿಲ್ಲಾಧಿಕಾರಿ ಹೊಸ ಪ್ಲಾನ್ ರೂಪಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮುನ್ನೂರರ ಗಡಿಯತ್ತ ಸಾಗಿದೆ. ಇಷ್ಟು ದಿನ ಕೇವಲ ಹೊರ ರಾಜ್ಯಗಳಿಂದ ಬಂದವರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಸೋಂಕು, ಇದೀಗ ಇತರರಿಗೂ ಹಬ್ಬುತ್ತಿದೆ. ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಬಹುತೇಕ ಸೋಂಕಿತರ ಸಂಪರ್ಕದಿಂದಲೇ ಸೋಂಕು ತಗುಲಿದ್ದು, ಇದೀಗ ಜಿಲ್ಲೆಯ ಜನರನ್ನು ಆತಂಕಕ್ಕೆ ತಳ್ಳಿದೆ.
ಜಿಲ್ಲೆಯಲ್ಲಿ ಒಟ್ಟು 293 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 161 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 132 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ. ಆದರೆ ಕಳೆದೊಂದು ವಾರದಿಂದ ನಿರಂತರವಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲಾಡಳಿತಕ್ಕೂ ತಳಮಳ ಶುರುವಾಗಿದೆ.
ಈ ಕಾರಣದಿಂದ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಹೊಸ ಯೋಜನೆ ರೂಪಿಸಿದ್ದು, ಸೋಂಕಿನ ಲಕ್ಷಣ ಇರುವ ಹಾಗೂ ಇಲ್ಲದಿರುವ ಸೋಂಕಿತರನ್ನು ಒಂದೇ ಕಡೆ ಇಡುವ ಬದಲು ಕ್ರಿಮ್ಸ್‌ನ ಕೊರೊನಾ ವಾರ್ಡ್‌ಅನ್ನು ಮೂರು ವಿಭಾಗಗಳಾಗಿ ವಿಂಗಡಿಸಲು ಮುಂದಾಗಿದ್ದಾರೆ.
ಉತ್ತರ ಕನ್ನಡದಲ್ಲಿ ಹೆಚ್ಚುತ್ತಿರುವ ಕೊರೊನಾ ಈ ಮೂಲಕ ರೋಗದ ಲಕ್ಷಣ ಇರುವವರು, ಲಕ್ಷಣ ಇಲ್ಲದವರು ಹಾಗೂ ಗಂಭೀರ ಸ್ವರೂಪದ ಸೋಂಕಿತರನ್ನು ಪ್ರತ್ಯೇಕಿಸಿ ಚಿಕಿತ್ಸೆ ಕೊಡಲು ಜಿಲ್ಲಾಧಿಕಾರಿ ಪ್ಲಾನ್ ರೂಪಿಸಿದ್ದಾರೆ.
ಕೊರೊನಾ ಆತಂಕದ ನಡುವೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಸಹ ನಡೆಯುತ್ತಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ವಿದ್ಯಾರ್ಥಿಗಳ ಪಾಲಕರಲ್ಲಿ ಆತಂಕ ಉಂಟುಮಾಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ, ಸಂಬಂಧಪಟ್ಟ ಜನಪ್ರತಿನಿಧಿಗಳನ್ನು ಕೇಳಿದ್ರೆ ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ. ಇದರಿಂದ ಸೋಂಕು ತಗಲುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚೈತ್ರಾ ಕೊಠಾರಕರ್.
ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಯಲ್ಲಾಪುರಕ್ಕೆ ಆಗಮಿಸಿದ್ದ 69 ವರ್ಷ ವೃದ್ಧೆ ಕ್ವಾರಂಟೈನ್ನಲ್ಲಿರುವಾಗಲೇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಆಕೆಗೆ ಕೊರೊನಾ ಇದ್ದಿದ್ದು ದೃಢಪಟ್ಟಿದೆ. ಇನ್ನೊಂದೆಡೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಟ್ಕಳ ಮೂಲದ 71 ವರ್ಷದ ವೃದ್ಧ ಕೂಡ ನಿನ್ನೆ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.
ಯಲ್ಲಾಪುರ ವೃದ್ಧೆ ಮೃತರಾದ ಬಳಿಕ ಸೋಂಕು ದೃಢಪಟ್ಟಿದ್ದರೂ ಈ ಮೂಲಕ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಇಬ್ಬರು ಸಾವನ್ನಪ್ಪಿದಂತಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿರುವ ಬೆನ್ನಲ್ಲೇ ಜಿಲ್ಲಾಡಳಿತ ಸೋಂಕಿತರ ಚಿಕಿತ್ಸೆಗೆ ಮತ್ತಷ್ಟು ಸಿದ್ಧತೆ ಮಾಡಿಕೊಳ್ಳಲು ಮುಂದಾಗಿರೋದು ಉತ್ತಮ ಬೆಳವಣಿಗೆಯಾಗಿದೆ.