ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ತೆರಳಿ ಪಥಸಂಚಲನ ತಂಡಗಳಿಂದ ಗೌರವ ಸ್ವೀಕರಿಸಿದರು.
ಪೊಲೀಸ್, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಸೇವಾದಳ, ಅರಣ್ಯ ಇಲಾಖೆ ಸೇರಿದಂತೆ ಒಟ್ಟು 13 ತಂಡಗಳು ಪೊಲೀಸ್ ಪರೇಡ್ ಮೈದಾನದಲ್ಲಿ ಸುಂದರ ಕವಾಯತು ಪ್ರದರ್ಶಿಸಿದವು. ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು- ನುಡಿ ಹಿರಿಮೆ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ 16 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.