ಕಾರವಾರ: ಕಾಡು ಪ್ರದೇಶಗಳಲ್ಲಿ ಜೀವದ ಹಂಗು ತೊರೆದು ತೆರಳುವ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಭತ್ಯೆ ನೀಡಬೇಕು ಮತ್ತು ಈಗಿರುವ ಗೌರವ ಧನವನ್ನು ಕನಿಷ್ಠ 12 ಸಾವಿರಕ್ಕೆ ಏರಿಕೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉತ್ತರಕನ್ನಡ ಜಿಲ್ಲಾ ಸಮಿತಿಯು ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ...ಮಾಸಿಕ ವೇತನ ಸೇರಿ ಬೇಡಿಕೆ ಈಡೇರಿಕೆಗೆ ಒತ್ತಾಯ - asha worker
ಕಾಡು ಪ್ರದೇಶಗಳಲ್ಲಿ ಜೀವದ ಹಂಗು ತೊರೆದು ತೆರಳುವ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಭತ್ಯೆ ನೀಡಬೇಕು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉತ್ತರಕನ್ನಡ ಜಿಲ್ಲಾ ಸಮಿತಿಯು ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಪ್ರಭಾರ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ ಸಮಸ್ಯೆ ಗಂಭೀರವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಗರದ ಬಸ್ ನಿಲ್ದಾಣದಿಂದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ 300ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀಡುವ ಪ್ರೋತ್ಸಾಹಧನವನ್ನು ಒಟ್ಟಿಗೆ ಸೇರಿಸಿ ಕನಿಷ್ಠ ಮಾಸಿಕವಾಗಿ 12 ಸಾವಿರ ನೀಡಬೇಕು. ಆಶಾ ಸಾಫ್ಟ್ ಪೋರ್ಟಲ್ ಗೆ ಆಶಾ ಪ್ರೋತ್ಸಾಹಧನದ ಜೋಡಣೆ ರದ್ದುಪಡಿಸಬೇಕು. ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರು ಒಂದು ಮನೆಯಿದ್ದರು ಅಲ್ಲಿಗೆ ತೆರಳಿ ಸೇವೆ ನೀಡುತ್ತಿದ್ದು, ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಅಂತವರಿಗೆ ವಿಶೇಷ ಭತ್ಯೆ ನೀಡಬೇಕು. ನಿವೃತ್ತಿ ಹೊಂದುವ ಆಶಾಗಳಿಗೆ ಪಿಂಚಣಿ ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸರ್ಕಾರ ನೀಡಬೇಕು.
ಅಲ್ಲದೆ ಜಿಲ್ಲೆಯ ವಿವಿಧ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಾಯಿಗಿಂತಲೂ ಕಡೆಯಾಗಿ ನೋಡುತ್ತಿದ್ದು, ಆಸ್ಪತ್ರೆಯೊಳಗೆ ಸೇರಿಸಿಕೊಳ್ಳುವುದಕ್ಕು ತೊಂದರೆ ನೀಡುತ್ತಿದ್ದಾರೆ. ಇದರಿಂದ ನಮಗೆ ತೊಂದರೆಯಾದಾಗ ಇಲ್ಲವೆ ಗರ್ಭೀಣಿಯರನ್ನು ಆಸ್ಪತ್ರೆಗೆ ಸೇರಿಸುವ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಗಳಲ್ಲಿ ಆಶಾ ಕಾರ್ಯಕರ್ತೆಯರು ತಂಗಲು ಪ್ರತ್ಯೇಕ ಕೊಠಡಿ ಹಾಗೂ ಚಿಕಿತ್ಸೆಗಳಿಗೆ ಸ್ಪಂಧಿಸಲು ಸೂಚಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಪ್ರಭಾರ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ ಸಮಸ್ಯೆ ಗಂಭೀರವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.