ಭಟ್ಕಳ: ಹೊನ್ನಾವರದ ನೂತನ ಬಸ್ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ ಸಚಿವ ಶ್ರೀರಾಮುಲು ಮುರುಡೇಶ್ವರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಸಾರಿಗೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಶ್ರೀರಾಮುಲು ನಿನ್ನೆ ಶಿರಸಿ ಹಾಗೂ ಸಿದ್ದಾಪುರದ ನೂತನ ಬಸ್ ನಿಲ್ದಾಣದ ಉದ್ಘಾಟನೆ ನೆರೆವೇರಿಸಿ ಸಂಜೆ ಮುರುಡೇಶ್ವರಕ್ಕೆ ಬಂದು ಇಲ್ಲಿನ ಆರ್.ಎನ್.ಎಸ್.ರೆಸಿಡೆನ್ಸಿ ಹೋಟೆಲ್ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡರು. ನಂತರ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಚಿವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ನಂತರ ಪಿಎಸ್ಐ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ನಾವೇ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಲ್ಲದೆ ಪಕ್ಷಪಾತ ಮಾಡದೆ ತನಿಖೆ ನಡೆಸುವಂತೆ ಸೂಚಿಸಿದ್ದೇವೆ ಎಂದರು.