ಕಾರವಾರ: ಕೊರೊನಾ ವೈರಸ್ ಕುರಿತು ಜವಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ ಕೆಲವರು ಬೇಕಾಬಿಟ್ಟಿಯಾಗಿ ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಒತ್ತಾಯಿಸಿದ್ದಾರೆ.
ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಏಳು ತಿಂಗಳಿಂದ ಕೊರೊನಾ ಕಾರಣದಿಂದಾಗಿ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ದೇಶದ ಆರ್ಥಿಕ ವ್ಯವಸ್ಥೆ ಕೂಡ ಹದಗೆಟ್ಟಿದೆ. ಈಗಾಗಲೇ ಸಾಕಷ್ಟು ಮಂದಿ ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ವೈದ್ಯರಾದ ತರುಣ್ ಕೋಟಾರಿ, ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.