ಕಾರವಾರ:ಸೀಮೆ ಎಣ್ಣೆ ಸುರಿದು ಹೆಂಡಿತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಆರೋಪಿ ಪತಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.
ಕುಮಟಾದ ಮೂರೂರು ಮೂಲದ ಆರೋಪಿ ದುಗ್ಗು ಕರಿಯಪ್ಪ ಗೌಡ ಶಿಕ್ಷೆಗೊಳಗಾದ ಅಪರಾಧಿ. ಈತ ತನ್ನ ಹೆಂಡತಿ ಗಣಪಿ ಅವರನ್ನು 11 ವರ್ಷಗಳ ಹಿಂದೆ ಮದುವೆಯಾಗಿದ್ದನು. ಆದರೆ ಮದುವೆಯಾದಾಗಿನಿಂದಲೂ ನನಗೆ ನೀನು ಇಷ್ಟವಿಲ್ಲ. ತಾನು ಬೇರೆ ಹುಡುಗಿಯನ್ನು ಪ್ರೀತಿಸುತ್ತಿದ್ದೆ ಎಂದು ಹೀಯಾಳಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದನು.
ಬಳಿಕ 2016ರ ಮಾ.20 ರಂದು ಸಂಬಂಧಿಕರನ್ನು ಕರೆದು ರಾಜಿ ಪಂಚಾಯಿತಿ ಮಾಡಿಸಿದ ಸಿಟ್ಟಿನಲ್ಲಿ ಹೆಂಡತಿಗೆ ಹೊಡೆದು ಬಡಿದು ಆಕೆಯ ಮೈಮೇಲೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿದ್ದನು. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ವಾರದ ಬಳಿಕ ಮೃತಪಟ್ಟಿದ್ದರು. ಈ ಬಗ್ಗೆ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ ಅವರು ಸುದೀರ್ಘ ವಿಚಾರಣೆ ನಡೆಸಿ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಆರೋಪಿತನಿಗೆ ಕಲಂ 302 ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕಿ ತನುಜಾ ಬಿ ಹೊಸಪಟ್ಟಣ ವಾದ ಮಂಡಿಸಿದ್ದರು.
ಇದನ್ನೂ ಓದಿ:ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್