ಕಾರವಾರ: ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿ ಎರಡೆರಡು ಬಾರಿ ತನಿಖೆ ನಡೆದಿತ್ತು. ಆದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶಗೊಂಡ ಸ್ಥಳಿಯರು ಇಂದು ಜಿಲ್ಲಾ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಬ್ಯಾನರ್ ಅಡಿ ಧರಣಿ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಗ್ರಾಮ ಪಂಚಾಯತ್ ಹಣಕಾಸು ಆಯೋಗದ ನಿಧಿ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಕುರಿತು ಎರಡು ಬಾರಿ ತನಿಖೆ ನಡೆಸಲಾಗಿದೆ. ತನಿಖಾ ವರದಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದ್ದರೂ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜಿಲ್ಲಾ ಪಂಚಾಯತ್ ಕೈಗೊಂಡಿಲ್ಲ. ತನಿಖಾ ವರದಿಗಳು ಕೇವಲ ಕಾಗದಪತ್ರಕ್ಕೆ ಸೀಮಿತವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.