ಕಾರವಾರ: ಮಹಾಶಿವರಾತ್ರಿ ಹಿನ್ನೆಲೆ ಗೋಕರ್ಣದ ಮಹಾಬಲೇಶ್ವರನ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದು, ಆತ್ಮಲಿಂಗ ದರ್ಶನ ಪಡೆದು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.
ಗೋಕರ್ಣ ಶಿವನ ಆತ್ಮಲಿಂಗವಿರುವ ಏಕೈಕ ಧಾರ್ಮಿಕ ಕ್ಷೇತ್ರವಾಗಿದ್ದು, ಮಹಾಶಿವರಾತ್ರಿಯಂದು ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಶಿವರಾತ್ರಿಯಂದು ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಅಷ್ಟೋತ್ತರ ಬಿಲ್ವಾರ್ಚನೆ, ಕುಂಭಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗುತ್ತದೆ. 6 ಗಂಟೆಯ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು, ಸರತಿ ಸಾಲಿನಲ್ಲಿ ಆಗಮಿಸಿ ಆತ್ಮಲಿಂಗ ಸ್ಪರ್ಶಿಸಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಭಕ್ತರು ಸಹ ಶ್ರದ್ಧಾ, ಭಕ್ತಿಯೊಂದಿಗೆ ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.